ADVERTISEMENT

ಮತ ಕಳ್ಳತನದ ವಿರುದ್ಧ ಆ. 4ಕ್ಕೆ ಬೆಂಗಳೂರಿನಲ್ಲಿ ರಾಹುಲ್‌ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 15:31 IST
Last Updated 29 ಜುಲೈ 2025, 15:31 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ‘ಮತ ಕಳ್ಳತನ’ ನಡೆದಿದೆ ಎಂದು ಆರೋಪ ಮಾಡಿ, ಚುನಾವಣಾ ಆಯೋಗದ ವಿರುದ್ಧ ತೊಡೆ ತಟ್ಟಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಗಸ್ಟ್‌ 4ರಂದು ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ.

‘ಕರ್ನಾಟಕದ ಲೋಕಸಭಾ ಕ್ಷೇತ್ರವೊಂದರಲ್ಲಿ ದೊಡ್ಡ ಪ್ರಮಾಣದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಶೀಘ್ರದಲ್ಲೇ ಈ ಭಯಂಕರ ಮತ ಕಳ್ಳತನದ ‘ಕಾರ್ಯ ವಿಧಾನ’ವನ್ನು ಯಥಾವತ್ತಾಗಿ ಚುನಾವಣಾ ಆಯೋಗ ಮತ್ತು ಜನರ ಮುಂದಿಡುತ್ತೇವೆ’ ಎಂದು ಇತ್ತೀಚೆಗೆ ರಾಹುಲ್‌ ಗುಡುಗಿದ್ದರು. ಇದೇ ವಿಷಯವನ್ನು ಮುಂದಿಟ್ಟು ಇಡೀ ರಾಷ್ಟ್ರದ ಗಮನಸೆಳೆಯಲು ಕರ್ನಾಟಕದಿಂದಲೇ ಬೃಹತ್ ಪ್ರತಿಭಟನೆ ನಡೆಸಲು ಅವರು ಮುಂದಾಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಪಾದಯಾತ್ರೆಯಲ್ಲಿ ರಾಹುಲ್‌ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರು, ಶಾಸಕರು, ರಾಜ್ಯ ಕಾಂಗ್ರೆಸ್‌ ನಾಯಕರು ಹೆಜ್ಜೆ ಹಾಕಲಿದ್ದಾರೆ.

ADVERTISEMENT

ಪಾದಯಾತ್ರೆಯ ತಯಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಸಲಿದ್ದಾರೆ. ಬೆಂಗಳೂರು ನಗರದ ಐದು ಜಿಲ್ಲಾ ಘಟಕಗಳ ಪ್ರಮುಖರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ದಕ್ಷಿಣ (ರಾಮನಗರ), ಮಂಡ್ಯ ಜಿಲ್ಲೆಯ ಮುಖಂಡರನ್ನು ಸಭೆಗೆ ಆಹ್ವಾನಿಸಲಾಗಿದೆ. ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ, ಸೆಲ್, ವಿಭಾಗಗಳ ಅಧ್ಯಕ್ಷರೂ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.