ADVERTISEMENT

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 2:09 IST
Last Updated 1 ಜೂನ್ 2020, 2:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಜೂನ್ 1 ಮತ್ತು 2ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಭಾಗದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಹಾಸನದಲ್ಲೂ ಹೆಚ್ಚು ಮಳೆಯಾಗಲಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

'ಈ ಬಾರಿ ನಿಗದಿತ ವೇಳೆಗೆ ಮುಂಗಾರು ಆರಂಭವಾಗುವ ಲಕ್ಷಣಗಳಿದ್ದರೂ ವಾಯುಭಾರ ಕುಸಿತದಿಂದಾಗಿ ಮುಂಗಾರು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದಿಂದ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಇನ್ನೆರಡು ದಿನಗಳವರೆಗೆ ಭಾರಿ ಮಳೆಯಾಗಲಿದೆ' ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು.

ADVERTISEMENT

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಭಾನುವಾರ 4 ಸೆಂ.ಮೀ ಮಳೆಯಾಗಿದೆ. ಹೊನ್ನಾವರ, ಹೆಸರಘಟ್ಟ 3, ಕೋಟ, ಗೋಕರ್ಣ, ಅಂಕೋಲಾ, ಕಾರವಾರ, ಬಾದಾಮಿ, ಶೃಂಗೇರಿ, ಗುಬ್ಬಿ, ಹಾಸನದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಕಲಬುರ್ಗಿಯಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.