ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಕಡೆಗೆ ನೈರುತ್ಯ ಮುಂಗಾರು ಪ್ರವೇಶಿಸಿದ್ದು, ಮುಂದಿನ ಎರಡು ದಿನಗಳಲ್ಲಿ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂ.4ರಂದು ಕೇರಳದ ಕರಾವಳಿ ಪ್ರವೇಶಿಸಿದ್ದ ಮುಂಗಾರು ಮಾರುತಗಳು ರಾಜ್ಯದ ದಕ್ಷಿಣ ಒಳನಾಡನ್ನು ಆವರಿಸಿವೆ. ಇದರ ಪರಿಣಾಮ ಬೆಂಗಳೂರು ಸೇರಿ ಇತರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಜೂ.9ರ ನಂತರ ಮುಂಗಾರು ಮತ್ತಷ್ಟು ಪ್ರಬಲವಾಗಲಿದೆ. ಈಗಿನ ಸ್ಥಿತಿಗತಿ ಅವಲೋಕಿಸಿದರೆ ಕರಾವಳಿ, ಮಲೆನಾಡು, ಘಟ್ಟ ಪ್ರದೇಶಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಬಿರುಸುಗೊಳ್ಳಲಿದೆ ಎಂದು ಇಲಾಖೆ ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 'ಯೆಲ್ಲೊ ಅಲರ್ಟ್' ಘೋಷಿಸಿದೆ. ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಹೆಚ್ಚಾಗಿರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹಾಗೂ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಭಾನುವಾರ 6 ಸೆಂ.ಮೀ. ಗರಿಷ್ಠ ಮಳೆಯಾಗಿದೆ. ಅಂಕೋಲ, ಆಗುಂಬೆ 5, ಚನ್ನಪಟ್ಟಣ 4, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3 ಸೆಂ.ಮೀ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.