ADVERTISEMENT

ಇಂದಿನಿಂದ ಭಾರಿ ಮಳೆ ಸಾಧ್ಯತೆ: 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 16:17 IST
Last Updated 8 ಜೂನ್ 2025, 16:17 IST
<div class="paragraphs"><p> –ಪ್ರಜಾವಾಣಿ ಚಿತ್ರ:&nbsp;ಲವ&nbsp;ಕೆ.</p><p></p></div>
   

–ಪ್ರಜಾವಾಣಿ ಚಿತ್ರ: ಲವ ಕೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. 

ADVERTISEMENT

ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬುಧವಾರ ಈ ಜಿಲ್ಲೆಗಳಿಗೂ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. 

ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಯಾದಗಿರಿ ಜಿಲ್ಲೆಯ ಹಲವೆಡೆ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಕೋಲಾರದಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. 

ಗುರುವಾರದಿಂದ ರಾಜ್ಯದ ವಿವಿಧೆಡೆ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆಯಿದ್ದು, ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. 

ಮನೆಗಳಿಗೆ ನುಗ್ಗಿದ ನೀರು

ಹುಬ್ಬಳ್ಳಿ: ಹುಬ್ಬಳ್ಳಿ, ಧಾರವಾಡ ನಗರದಲ್ಲಿ ಭಾನುವಾರ ಕೆಲ ಸಮಯ ರಭಸದ ಮಳೆಯಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಚಚಡಿಯಲ್ಲಿ ಶನಿವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದು, ದವಸ–ಧಾನ್ಯಗಳು, ರಸಗೊಬ್ಬರ ನೀರುಪಾಲಾಗಿವೆ. ಕೆಲವೆಡೆ ಹೊಲದ ಒಡ್ಡುಗಳು ಒಡೆದಿವೆ.

‘ಬಿತ್ತನೆಗಾಗಿ 50 ರಸಗೊಬ್ಬರ ಚೀಲಗಳನ್ನು ಮನೆಯಲ್ಲಿ ಇರಿಸಿದ್ದೆವು. ದವಸ–ಧಾನ್ಯಗಳೂ ಇದ್ದವು. ಬಿಟ್ಟುಬಿಡದೆ ಸುರಿದ ಮಳೆಯಿಂದ ಮನೆಗೆ ನೀರು ನುಗ್ಗಿ, ಅವೆಲ್ಲ ನೀರುಪಾಲಾಗಿವೆ’ ಎಂದು ಸವದತ್ತಿ ರೈತ ಖಾನಸಾಬ್‌ ಶಿಲೇದಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ಉದ್ದು, ಹೆಸರು, ಸೋಯಾಬೀನ್‌ ಮತ್ತಿತರ ಬೆಳೆಗಳನ್ನು ಬಿತ್ತಿದ್ದೆವು. ಧಾರಾಕಾರ ಮಳೆಯಿಂದ ಹೊಲದಲ್ಲಿನ ಒಡ್ಡುಗಳೆಲ್ಲ ಒಡೆದು, ಮೊಳಕೆಯೊಡೆಯುವ ಹಂತಕ್ಕೆ ಬಂದಿದ್ದ ಬೀಜಗಳೆಲ್ಲ ಕೊಚ್ಚಿಕೊಂಡು ಹೋಗಿವೆ’ ಎಂದು ರೈತರಾದ ಸೋಮಪ್ಪ ಹುಡೇದ, ರಾಜೇಸಾಬ್‌ ಯಕ್ಕುಂಡಿ ಅಸಹಾಯಕತೆ ತೋಡಿಕೊಂಡರು. 

ಧಾರವಾಡ ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾನುವಾರ ಬಿರುಸಿನ ಮಳೆಯಾಗಿದೆ. ಗುಡುಗು, ಮಿಂಚಿನ ಆರ್ಭಟದೊಂದಿಗೆ ಸಂಜೆ ಸುಮಾರು ಮುಕ್ಕಾಲು ಗಂಟೆ ಜೋರಾಗಿ ಸುರಿಯಿತು. ಕೆಲವೆಡೆ ತಗ್ಗುಪ‍್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೂ ತೊಡಕಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.