ADVERTISEMENT

ಮಳೆ ನಷ್ಟ: ಪರಿಷ್ಕೃತ ವರದಿಗೆ ಸಿಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 17:54 IST
Last Updated 5 ಸೆಪ್ಟೆಂಬರ್ 2022, 17:54 IST
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ    

ಬೆಂಗಳೂರು: ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಉಂಟಾಗಿರುವ ನಷ್ಟದ ಕುರಿತು ಮಂಗಳವಾರ ರಾತ್ರಿಯೊಳಗೆ ಪರಿಷ್ಕೃತ ವರದಿಯನ್ನು ಸಲ್ಲಿಸುವಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಅತಿವೃಷ್ಟಿಯಿಂದ ಹೆಚ್ಚು ಹಾನಿಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಸೋಮವಾರ ಸಂಜೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ಅವರು, ‘ಮಳೆಹಾನಿ ಕುರಿತು ತಿಂಗಳ ಹಿಂದೆ ವರದಿ ಪಡೆಯಲಾಗಿತ್ತು. ಈಗ ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೋರಲು ಪರಿಷ್ಕೃತ ವರದಿ ಸಲ್ಲಿಸಬೇಕು. ಅದಕ್ಕೆ ಪೂರಕವಾಗಿ ಎಲ್ಲರೂ ತಕ್ಷಣ ವರದಿ ಸಲ್ಲಿಸಬೇಕು’ ಎಂದು ಸೂಚಿಸಿದರು.

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ‘ಮಳೆಹಾನಿ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರ ನೇಮಿಸಿರುವ ಅಧಿಕಾರಿಗಳ ತಂಡವು ಮಂಗಳವಾರ ಬೆಂಗಳೂರಿಗೆ ಬರಲಿದೆ. ಹೆಚ್ಚುವರಿ ಪರಿಹಾರ ಕೋರಲು ಈ ತಂಡಕ್ಕೆ ಹೊಸ ಪ್ರಸ್ತಾವ ಸಲ್ಲಿಸಬೇಕಿದೆ. ಅದಕ್ಕೆ ಪೂರಕವಾಗಿ ಪರಿಷ್ಕೃತ ವರದಿಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ADVERTISEMENT

ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಗಳಲ್ಲಿ ಸಾಕಷ್ಟು ಹಣವಿದೆ. ಈಗ ಮಳೆಯಿಂದ ಹಾನಿಯಾಗಿರುವ ಮೂಲಸೌಕರ್ಯಗಳ ದುರಸ್ತಿಗೆ ಹೆಚ್ಚುವರಿಯಾಗಿ ₹ 600 ಕೋಟಿ ಬಿಡುಗಡೆಗೆ ಆದೇಶಿಸಲಾಗಿದೆ. ಅದರಲ್ಲಿ ₹ 300 ಕೋಟಿಯನ್ನು ಬೆಂಗಳೂರಿಗೆ ಮತ್ತು ₹ 300 ಕೋಟಿಯನ್ನು ಇತರ ಜಿಲ್ಲೆಗಳಿಗೆ ವೆಚ್ಚ ಮಾಡಲು ನಿರ್ದೇಶನ ನೀಡಲಾಗಿದೆ. ಮಳೆಯಿಂದ ಸಂತ್ರಸ್ತರಾಗಿರುವ ಜನರಿಗೆ ತ್ವರಿತವಾಗಿ ಪರಿಹಾರ ಒದಗಿಸಲು ಸೂಚಿಸಲಾಗಿದೆ. ಪರಿಹಾರ ಕಾರ್ಯಕ್ಕೆ ಹಣದ ಕೊರತೆ ಉದ್ಭವಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ತೊರೆಕಾಡನಹಳ್ಳಿಯಲ್ಲಿ ಉಂಟಾಗಿರುವ ಸಮಸ್ಯೆಯಿಂದ ಬೆಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗುವುದು. ಕೊರತೆ ಉಂಟಾದ ಪ್ರದೇಶಗಳಲ್ಲಿ ಕೊಳವೆ ಬಾವಿಗಳನ್ನು ಬಳಕೆ ಮಾಡಿಕೊಂಡು ನೀರು ಪೂರೈಕೆಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಬೆಂಗಳೂರಿಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಮತ್ತೊಂದು ಕಂಪನಿ ಆರಂಭಿಸಲು ₹ 9.5 ಕೋಟಿ ಮಂಜೂರು ಮಾಡಲಾಗಿದೆ. ರಾಜ್ಯದ ಇತರೆಡೆಗೆ ಇನ್ನೊಂದು ಹೆಚ್ಚುವರಿ ತಂಡ ಆರಂಭಿಸಲಾಗುವುದು. ನಿವೃತ್ತ ಸೈನಿಕರನ್ನು ಈ ತಂಡಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಚಿವರಾದ ಆರ್‌. ಅಶೋಕ, ವಿ. ಸೋಮಣ್ಣ, ಹಾಲಪ್ಪ ಆಚಾರ್‌, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್‌, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ ಪ್ರಸಾದ್‌ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.