ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚಿಕ್ಲಿಹೊಳೆ ಜಲಾಶಯ ಮುಂಗಾರು ಆರಂಭದಲ್ಲಿಯೇ ಭರ್ತಿಯಾಗಿ ಪ್ರವಾಸಿಗರನ್ನು ಸೆಳೆಯುತ್ತಿದೆ
ಮಂಗಳೂರು/ಹುಬ್ಬಳ್ಳಿ: ರಾಜ್ಯದ ವಿವಿಧ ಭಾಗಗಳಲ್ಲಿ ಸೋಮವಾರವೂ ಮಳೆಯ ಅಬ್ಬರ ಮುಂದುವರಿದಿದೆ. ಕೆಲವೆಡೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಿನವಿಡೀ ಧಾರಾಕಾರ ಮಳೆಯಾಗಿದೆ. ಗಾಳಿಯೂ ಜೋರಾಗಿತ್ತು.
ಪಶ್ಚಿಮ ಘಟ್ಟ ಹಾಗೂ ಘಟ್ಟದ ಮೇಲ್ಭಾಗದಲ್ಲೂ ಭಾರಿ ಮಳೆಯಾಗಿ ದ್ದರಿಂದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಭೇಟಿ ನೀಡಿರುವ ಭಕ್ತರು ಸ್ನಾನಘಟ್ಟದ ಬಳಿ ನದಿಯ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಭಾಗಮಂಡಲದಲ್ಲಿ 22.50 ಸೆಂ.ಮೀ ಮಳೆ ಸುರಿದಿದ್ದು, ಕಾವೇರಿ ನದಿ ಉಕ್ಕಿ ಹರಿದಿದೆ. ಹಾಸನದ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು, ಮಣ್ಣು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ, ಅಂಗನವಾಡಿಯಿಂದ ಹಿಡಿದು ಪಿಯುಸಿ ವರೆಗಿನ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಂಗಳವಾರ ಮತ್ತು ಬುಧವಾರ ರಜೆ ನೀಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.