ಬೆಂಗಳೂರು: ರಾಜ್ಯದ ವಿವಿಧೆಡೆ ಒಂದು ವಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು 18 ಜಿಲ್ಲೆಗಳಿಗೆ ಸೋಮವಾರ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಆಂಧ್ರಪ್ರದೇಶದ ಕರಾವಳಿಯ ಮಧ್ಯಭಾಗಗಳು ಸೇರಿ ವಿವಿಧೆಡೆ ಚಂಡಮಾರುತದ ಪರಿಚಲನೆ ಸರಾಸರಿ ಸಮುದ್ರಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದಾಗಿ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ತುಮಕೂರು ಹಾಗೂ ಕೋಲಾರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಸೋಮವಾರ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
ಬೆಂಗಳೂರು ನಗರ ಸೇರಿ 15 ಜಿಲ್ಲೆಗಳಿಗೆ ಮಂಗಳವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಕಲಬುರಗಿ, ಯಾದಗಿರಿ ಹಾಗೂ ಬೀದರ್‌ನಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.