
ಬೆಂಗಳೂರು: ರಾಮನಗರದ ಪ್ರಸ್ತಾವಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು ಆವರಣದಲ್ಲಿ 650 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಅವರು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ ಅವರಿಗೆ ಪತ್ರ ಬರೆದಿದ್ದಾರೆ.
ವಿಶ್ವವಿದ್ಯಾಲಯದ ಸಂಪೂರ್ಣ ಅನುದಾನದಡಿ ಸುಮಾರು ₹600 ಕೋಟಿ ವೆಚ್ಚದಲ್ಲಿ ಕೇವಲ ಆಡಳಿತ ಭವನ ಮತ್ತು ವೈದ್ಯಕೀಯ ಕಾಲೇಜು ಕಟ್ಟಡಗಳ ನಿರ್ಮಾಣ ನಡೆಯುತ್ತಿದೆ. ಆದರೆ, ಈ ಆವರಣದಲ್ಲಿ ಆಸ್ಪತ್ರೆ ನಿರ್ಮಾಣದ ಯೋಜನೆಯನ್ನು ಸೇರಿಸಿಲ್ಲ. ಇದರಿಂದ ಆರೋಗ್ಯ ವಿಶ್ವವಿದ್ಯಾಲಯ ಯೋಜನೆ ಪರಿಪೂರ್ಣ ಎನಿಸುವುದಿಲ್ಲ. ಯಾವುದೇ ವೈದ್ಯಕೀಯ ಕಾಲೇಜಿಗೆ ಶೈಕ್ಷಣಿಕ, ಸಾರ್ವಜನಿಕ ಆರೋಗ್ಯ ಹಾಗೂ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮಾನ್ಯತೆ ದೃಷ್ಟಿಯಿಂದ 650 ಹಾಸಿಗೆಗಳ ಸಾಮರ್ಥ್ಯದ ಸಂಪೂರ್ಣ ಕಾರ್ಯನಿರ್ವಹಣೆಯ ಆಸ್ಪತ್ರೆ ಅನಿವಾರ್ಯ ಎಂದು ಅವರು ಹೇಳಿದ್ದಾರೆ.
ಜಿಲ್ಲಾ ಕೇಂದ್ರವಾಗಿರುವ ರಾಮನಗರದಲ್ಲಿ ಇಂತಹ ಆಸ್ಪತ್ರೆಯ ಸ್ಥಾಪನೆಯಿಂದ ವೈದ್ಯಕೀಯ ಮಂಡಳಿ, ರಾಷ್ಟ್ರೀಯ ವೈದ್ಯಕೀಯ ಆಯೋಗದ ಕ್ಲಿನಿಕಲ್ ತರಬೇತಿ ಮಾನದಂಡ ಪೂರೈಸುವುದರ ಜತೆಗೆ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನತೆಗೆ ದ್ವಿತೀಯ ಮತ್ತು ತೃತೀಯ ಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ಲಭಿಸುತ್ತವೆ ಎಂದು ಮಂಜುನಾಥ್ ತಿಳಿಸಿದ್ದಾರೆ.
ಈಗ ರಾಮನಗರ ಜಿಲ್ಲಾ ಆಸ್ಪತ್ರೆ ಕೇವಲ 250 ಹಾಸಿಗೆಗಳ ಸಾಮರ್ಥ್ಯ ಹೊಂದಿದೆ. ಅದು ವೈದ್ಯಕೀಯ ಕಾಲೇಜು ಆವರಣದಿಂದ ಸುಮಾರು 3 ಕಿ.ಮೀ ದೂರದಲ್ಲಿರುವುದರಿಂದ ಶೈಕ್ಷಣಿಕ ಸಮನ್ವಯ, ರೋಗಿಗಳ ಆರೈಕೆ, ತುರ್ತು ಸೇವೆಗಳು, ಮೂಲಸೌಕರ್ಯ ಮತ್ತು ಮಾನವ ಸಂಪನ್ಮೂಲಗಳ ಸಮರ್ಪಕ ಬಳಕೆಯ ಗಂಭೀರವಾದ ಪ್ರಾಯೋಗಿಕ ಅಡಚಣೆ ಉಂಟಾಗುತ್ತದೆ. ಆದ್ದರಿಂದ ವೈದ್ಯಕೀಯ ಕಾಲೇಜು ಆವರಣದಲ್ಲೇ 650 ಹಾಸಿಗೆಗಳ ಆಸ್ಪತ್ರೆ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.