ADVERTISEMENT

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್‌ನಿಂದ ವಿಪ್‌ ಜಾರಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2022, 9:33 IST
Last Updated 3 ಜೂನ್ 2022, 9:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳ ಭರ್ತಿಗೆ ಜೂನ್‌ 10ರಂದು ನಡೆಯುವ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಕಾಂಗ್ರೆಸ್‌ ಪಕ್ಷ ತನ್ನ ಶಾಸಕರಿಗೆ ವಿಪ್‌ ಜಾರಿಗೊಳಿಸಿದೆ.

ಪತ್ರದ ಮೂಲಕ ಎಲ್ಲ ಶಾಸಕರಿಗೂ ಗುರುವಾರವೇ ವಿಪ್‌ ಜಾರಿ ಮಾಡಿರುವ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್‌ ಸಿಂಗ್‌, ಜೂನ್‌ 10ರ ಬೆಳಿಗ್ಗೆ 9ರಿಂದಿ ಸಂಜೆ 4ರವರೆಗೆ ನಡೆಯುವ ರಾಜ್ಯಸಭೆ ಚುನಾವಣೆಯಲ್ಲಿ ಕಡ್ಡಾಯವಾಗಿ ಹಾಜರಾಗಿ, ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂಬ ನಿರ್ದೇಶನ ನೀಡಿದ್ದಾರೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಆರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಚಿತ್ರನಟ ಜಗ್ಗೇಶ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಲಹರ್‌ ಸಿಂಗ್‌ ಸಿರೋಯ ಬಿಜೆಪಿ ಅಭ್ಯರ್ಥಿಗಳಾಗಿದ್ದಾರೆ. ಕಾಂಗ್ರೆಸ್‌ನಿಂದ ರಾಜ್ಯಸಭೆಯ ಹಾಲಿ ಸದಸ್ಯ ಜೈರಾಂ ರಮೇಶ್‌, ಪಕ್ಷದ ಹಿರಿಯ ಮುಖಂಡ ಕೆ. ರೆಹಮಾನ್‌ ಖಾನ್‌ ಅವರ ಮಗ ಮನ್ಸೂರ್‌ ಅಲಿ ಖಾನ್‌ ಕಣದಲ್ಲಿದ್ದಾರೆ. ಜೆಡಿಎಸ್‌ ಅಭ್ಯರ್ಥಿಯಾಗಿ ರಾಜ್ಯಸಭೆಯ ಮಾಜಿ ಸದಸ್ಯ ಡಿ. ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

ಖಾಲಿ ಇರುವ ಸ್ಥಾನಗಳಿಗಿಂತಲೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಮತದಾನ ನಡೆಯುವುದು ಬಹುತೇಕ ಖಚಿತವಾಗಿದೆ. ಈ ಕಾರಣದಿಂದ ಕಾಂಗ್ರೆಸ್‌ ತನ್ನ ಶಾಸಕರಿಗೆ ವಿಪ್‌ ಜಾರಿಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.