ADVERTISEMENT

‘ರಾಮ್‌–ರಹೀಮ್‌ ಕೂಡಿಕೆಯೇ ಅನುಮಾನಾಸ್ಪದ: ಹೈಕೋರ್ಟ್ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2025, 15:50 IST
Last Updated 20 ನವೆಂಬರ್ 2025, 15:50 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಧರ್ಮದ ಹೆಸರಲ್ಲಿ ಸರ್ಕಾರಿ ಜಾಗಗಳನ್ನು ಅತಿಕ್ರಮಿಸುವುದು ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುವುದನ್ನು ಸಹಿಸಲು ಆಗದು’ ಎಂದು ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ವೇಳೆ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರಿ ಜಾಗದ ತೆರವುಗೊಳಿಸುವಂತೆ ಕೋಲಾರ ತಹಶೀಲ್ದಾರ್ ನೀಡಿದ್ದ ನೋಟಿಸ್ ಪ್ರಶ್ನಿಸಿ ಗ್ರಾಮದ ‘ವಿರಾಟ್ ಹಿಂದೂ ಸೇವಾ ಚಾರಿಟಬಲ್ ಟ್ರಸ್ಟ್’ ಹಾಗೂ ‘ಜಾಮಿಯಾ ಮಸ್ಜಿದ್ ಕಮಿಟಿ’ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ‘ಎರಡೂ ಧರ್ಮದವರು ಹೈಕೋರ್ಟ್‌ ಮೆಟ್ಟಿಲೇರಿರುವುದನ್ನು ನೋಡಿದರೆ ರಾಮ್-ರಹೀಮ್‌ ಕೂಡಿಕೆಯೇ ಹಲವು ಅನುಮಾನಗಳನ್ನು ಹುಟ್ಟು ಹಾಕುತ್ತಿದೆ’ ಎಂದು ಆಶ್ಚರ್ಯ ವ್ಯಕ್ತಪಡಿಸಿತು.

ADVERTISEMENT

ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಕೋಲಾರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್‌ಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತು.

ಕೋಲಾರ ತಾಲ್ಲೂಕು ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಸರ್ಕಾರಿ ಶಾಲೆಯ ಕಾಂಪೌಂಡ್ ಹಾಗೂ ಗ್ರಾಮದ ರಸ್ತೆಯ ಸರ್ಕಾರಿ ಜಾಗದಲ್ಲಿ ಕಟ್ಟಲಾಗಿರುವ ಮಳಿಗೆಗಳ ತೆರವಿಗೆ ನೀಡಲಾಗಿದ್ದ ನೋಟಿಸ್ ಅನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.