ADVERTISEMENT

ಲಕ್ಷ್ಮಣ ಸವದಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 9:25 IST
Last Updated 28 ಜುಲೈ 2020, 9:25 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ‘ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ನಸೀಬಿದ್ದರೆ ಮುಖ್ಯಮಂತ್ರಿ ಆಗಲಿ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

‘ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂದು ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿಯಾನ ನಡೆಸಲಾಗುತ್ತಿದೆಯಲ್ಲಾ’ ಎನ್ನುವ ಪತ್ರಕರ್ತರ ಪ್ರಶ್ನೆಗೆ ಮಂಗಳವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ಅಭಿಯಾನದ ಬಗ್ಗೆ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿಯಾದರೆ ಆಗಲಿ ಪಾಪ’ ಎಂದರು.

‘ಹೈಕಮಾಂಡ್‌ನವರು ಹಾಗೂ ಮುಖ್ಯಮಂತ್ರಿ ಚರ್ಚಿಸಿ ನಿಗಮ–ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ‌ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಾಗೂ ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಸಣ್ಣ ಪುಟ್ಟ ಅಸಮಾಧಾನ ಸಹಜ. ಅದನ್ನು ವರಿಷ್ಠರು ಸರಿಪಡಿಸುತ್ತಾರೆ’ ಎಂದರು.

ADVERTISEMENT

‘ಕೃಷ್ಣಾ ನದಿಗೆ ನೀರು ಬಿಡುಗಡೆಗೆ ಮುನ್ನ ರಾಜ್ಯದ ಅಧಿಕಾರಿಗಳಿಗೆ ಮಾಹಿತಿ ನೀಡುವ ವಿಷಯವಾಗಿ ನೆರೆಯ ಮಹಾರಾಷ್ಟ್ರದ ಕೊಲ್ಹಾಪುರ ಹಾಗೂ ಸಾಂಗ್ಲಿಯ ಅಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲಾಧಿಕಾರಿಗಳ ಸಮನ್ವಯದಲ್ಲಿ ಕಾರ್ಯನಿರ್ವಹಿಸಬೇಕು. ನೀರು ಹರಿಸುವುದಕ್ಕೆ ಮುನ್ನ ನಮ್ಮ ಮೂರೂ ಜಿಲ್ಲೆಗಳ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆಗ ಅನಾಹುತ ಕಡಿಮೆಯಾಗುತ್ತದೆ ಎಂದು ತಿಳಿಸಿದ್ದೇನೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ’ ಎಂದು ತಿಳಿಸಿದರು.

‘ಒಂದೂವರೆ ತಿಂಗಳಿಂದ ರಾಜ್ಯದಾದ್ಯಂತ ಪ್ರವಾಸ ಮಾಡಿ ಇಲಾಖೆಯ ಯೋಜನೆಗಳನ್ನು ವೀಕ್ಷಿಸಿದ್ದೇನೆ. ಸಮಸ್ಯೆಗಳನ್ನು ನೋಡಿದ್ದೇನೆ. ಗುರುವಾರ ಹಾಗೂ ಶುಕ್ರವಾರ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.