
ಜಿ. ಪರಮೇಶ್ವರ
ಬೆಂಗಳೂರು: ‘ರಂಜಾನ್ ಮತ್ತು ಹೋಳಿ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹಬ್ಬಗಳ ಆಚರಣೆ ವೇಳೆ ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ಕೊಡುವುದಿಲ್ಲ’ ಎಂದರು.
‘ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದಿರುವ ಕಾರಣ, ಪೊಲೀಸ್ ಇಲಾಖೆ ಜಾಗ್ರತೆ ವಹಿಸಿದೆ. ಇತರೆ ಕಡೆಗಳಿಗೆ ಹರಡದಂತೆ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದರು.
ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: ‘ಪ್ರತಿ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಅಕ್ರಮ ವಲಸಿಗರು ಕಾಫಿ ತೋಟ, ಕಟ್ಟಡಗಳಲ್ಲಿ ಕೆಲಸ ಮಾಡುತ್ತಾರೆಂಬ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿ, ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.
ಹೈಕಮಾಂಡ್ ತೀರ್ಮಾನ:
ದಲಿತ ಮುಖ್ಯಮಂತ್ರಿ ಕೂಗು ಕೇಳಿ ಬರುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಇದೆಲ್ಲ ವಿರೋಧ ಪಕ್ಷದವರು ಮಾಡುತ್ತಿರುವ ಕೆಲಸ. ತಮ್ಮ ವಿಚಾರಗಳನ್ನು ಮುಚ್ಚಿಟ್ಟುಕೊಳ್ಳಲು ಈ ರೀತಿ ಆರೋಪಗಳನ್ನು ಮಾಡುತ್ತಿದ್ದಾರೆ. ದಲಿತ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ಪಕ್ಷ ಮಾಡಬೇಕಲ್ಲದೆ ಇನ್ಯಾರು ಮಾಡುತ್ತಾರೆ. ಸಂದರ್ಭ ಬಂದಾಗ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡಲಿದೆ’ ಹೇಳಿದರು.
ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ ನಡೆಸುವ ವಿಚಾರದ ಕುರಿತು ಮಾತನಾಡಿದ ಅವರು, ‘ವಿದ್ಯಾರ್ಥಿ ಚುನಾವಣೆ ನಡೆಸುವ ಬಗ್ಗೆ ಪುನರ್ ಪರಿಶೀಲನೆ ಮಾಡಬೇಕೆಂಬ ಒತ್ತಡ ಬರುತ್ತಿದೆ. ಈ ಬಗ್ಗೆ ಸಚಿವ ಸಂಪುಟ ನಿರ್ಧರಿಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.