ADVERTISEMENT

ರನ್ಯಾ ರಾವ್‌ ಅರ್ಜಿ: ಆಕ್ಷೇಪಣೆ ಸಲ್ಲಿಸಲು ಗಡುವು

​ಪ್ರಜಾವಾಣಿ ವಾರ್ತೆ
Published 13 ಮೇ 2025, 23:39 IST
Last Updated 13 ಮೇ 2025, 23:39 IST
ರನ್ಯಾ ರಾವ್‌
ರನ್ಯಾ ರಾವ್‌   

‘ಅಕ್ರಮ ಚಿನ್ನ ಸಾಗಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರಿಗೆ ಕಾಫಿಪೋಸಾ ಕಾಯ್ದೆ ಅನ್ವಯಿಸಿ ಬಂಧನದಲ್ಲಿ ಇರಿಸಿರುವುದು ಕಾನೂನುಬಾಹಿರ ಮತ್ತು ಈ ಕ್ರಮವನ್ನು ಅನೂರ್ಜಿತ ಎಂದು ಘೋಷಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಿದೆ.

ಈ ಸಂಬಂಧ ರನ್ಯಾ ರಾವ್ ತಾಯಿ ಎಚ್.ಪಿ.ರೋಹಿಣಿ (58) ಸಲ್ಲಿಸಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಚಂದ್ರಶೇಖರ್‌, ‘ಅರ್ಜಿದಾರರನ್ನು ಬಂಧಿಸುವ ಮುನ್ನ ಅನುಸರಿಸ ಬೇಕಾದ ನ್ಯಾಯಿಕ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಪಾಲನೆ ಮಾಡಿಲ್ಲ. ಸಕ್ಷಮ ಪ್ರಾಧಿಕಾರದ ಗಮನಕ್ಕೆ ತಾರದೆ ರನ್ಯಾ ರಾವ್ ಅವರನ್ನು, ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ–1974ರ (ಕಾಫಿಪೋಸಾ) ಅಡಿಯಲ್ಲಿ ಬಂಧಿಸಲಾಗಿದೆ. ಇದು ಕಾನೂನುಬಾಹಿರ. ಆದ್ದರಿಂದ, ಬಂಧನವನ್ನು ಕಾನೂನು ಬಾಹಿರ ಎಂದು ಘೋಷಿಸಿ. ಕೂಡಲೆ ರನ್ಯಾ ಅವರನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಕೇಂದ್ರ ಸರ್ಕಾರದ ಪರ ಹಾಜರಿದ್ದ ಡೆಪ್ಯುಟಿ ಸಾಲಿಸಿಟರ್‌ ಜನರಲ್‌ ಎಚ್‌.ಶಾಂತಿಭೂಷಣ್‌, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ
ಮನವಿ ಮಾಡಿದರು. ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್‌ 3ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.