ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಅವರ ಸಹಚರರ ವಿರುದ್ಧ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ.
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು. ಎರಡು ಪ್ರಕರಣಗಳಲ್ಲೂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.
‘ಮೇ 20ರಂದು ಮುನಿರತ್ನ ವಿರುದ್ಧ ದಾಖಲಾಗಿದ್ದ ಆತ್ಯಾಚಾರ ಪ್ರಕರಣವನ್ನೂ ಎಸ್‌ಐಟಿ ವಹಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ ನೀಡಿದ್ದ ದೂರು ಆಧರಿಸಿ ಮುನಿರತ್ನ, ವಸಂತ, ಚನ್ನಕೇಶ, ಕಮಲ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
‘ಹಿಂದೆ ಬಿಜೆಪಿಯಲ್ಲಿ ಕೆಲಸ ಮಾಡುತ್ತಿದ್ದೆ. ಪತಿ ಬಿಟ್ಟು ಹೋಗಿದ್ದರಿಂದ ಮತ್ತೊಬ್ಬರನ್ನು ಮದುವೆ ಆಗಿದ್ದೆ. ವೇಶ್ಯಾವಾಟಿಕೆ ನಡೆಸುತ್ತಿದ್ದೇನೆ ಆರೋಪ ಹೊರಿಸಿದ್ದ ಆರೋಪಿಗಳು, ನನ್ನನ್ನು ಜೈಲಿಗೆ ಕಳುಹಿಸಿದ್ದರು. ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ಮುನಿರತ್ನ ಅವರ ಬೆಂಬಲಿಗರು ಬಂದು ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವ ಆಮಿಷವೊಡ್ಡಿದ್ದರು. ನಂತರ, ಶಾಸಕರ ಕಚೇರಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ನನ್ನ ಎಡಗೈಗೆ ಇಂಜೆಕ್ಷನ್ ಚುಚ್ಚಿ, ಜೀವನಪರ್ಯಂತ ನರಳುತ್ತೀಯಾ ಎಂದು ಬೆದರಿಸಿದ್ದರು’ ಎಂದು ಸಂತ್ರಸ್ತೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.