
ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ವಜಾಗೊಳಿಸಿದೆ.
‘ನನ್ನ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಮುನಿರತ್ನ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಈ ಪ್ರಕರಣದಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವಿಶೇಷ ತನಿಖಾ ದಳ (ಎಸ್‌ಐಟಿ) ವಿಚಾರಣಾ ನ್ಯಾಯಾಲಯಕ್ಕೆ ಬಿ ಅಂತಿಮ ವರದಿ ಸಲ್ಲಿಸಿರುವುದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿತು.
ಪ್ರಕರಣವೇನು?: ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯು ಮೇ 20ರಂದು ದೂರು ದಾಖಲಿಸಿದ್ದರು. ‘ಬಿಜೆಪಿ ಕಾರ್ಯಕರ್ತೆಯಾಗಿದ್ದ ನನ್ನ ಮೇಲೆ ಮುನಿರತ್ನ ಅವರು ತಮ್ಮ ಸಹಚರರಿಂದ 2023ರ ಜೂನ್ 11ರಂದು ಅವರ ಕಣ್ಣೆದುರು ಅತ್ಯಾಚಾರ ಮಾಡಿಸಿದ್ದಾರೆ’ ಎಂದು ಆರೋಪಿಸಿ 40 ವರ್ಷದ ಸಂತ್ರಸ್ತೆ ಒಟ್ಟು ಐವರ ವಿರುದ್ಧ ಆರ್‌ಎಂಸಿ ಠಾಣೆಗೆ ದೂರು ನೀಡಿದ್ದರು.
ಈ ಕ್ರಿಮಿನಲ್ ಪ್ರಕರಣದಲ್ಲಿ ಮೊದಲ ಆರೋಪಿಯನ್ನಾಗಿಸಿ ಮುನಿರತ್ನ ಮತ್ತು ನಂದಿನಿ ಲೇಔಟ್‌ನ ವಸಂತ ಕುಮಾರ್, ಚನ್ನಕೇಶವ, ಆಶ್ರಯ ನಗರದ ಕಮಲ್ ಹಾಗೂ ಅನಾಮಧೇಯ ವ್ಯಕ್ತಿಯೊಬ್ಬನನ್ನು ಹೆಸರಿಸಲಾಗಿತ್ತು. ದೂರಿನ ಅನ್ವಯ ಐಪಿಸಿ ಸೆಕ್ಷನ್‌ಗಳಾದ 376 ಡಿ, 270, 323, 354, 504, 506,509 ಹಾಗೂ 34ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.