ಬೆಂಗಳೂರು: ವಿರಳ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸಮರ್ಪಕ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್ ಸಂಸ್ಥೆಗಳ ಸಹಯೋಗದಲ್ಲಿ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯವು ‘ವಿರಳ ರೋಗಗಳ ರಾಷ್ಟ್ರೀಯ ನೀತಿ– 2021’ರ (ತಿದ್ದುಪಡಿ) ಅಡಿ ತಲಾ ₹50 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಔಷಧ ಒದಗಿಸುತ್ತಿದೆ. 2016ರಿಂದ ರಾಜ್ಯದಲ್ಲಿ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿಯೂ (ಐಜಿಐಸಿಎಚ್) ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಸ್ಥೆಯಲ್ಲಿ 22 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಮಕ್ಕಳಲ್ಲಿನ ವಿರಳ ಕಾಯಿಲೆಗಳ ಚಿಕಿತ್ಸೆಗಾಗಿ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ₹76 ಕೋಟಿ ಅನುದಾನ ಒದಗಿಸಲಾಗಿದೆ. ಈಗ ಹೆಚ್ಚಿನ ಅನುದಾನಕ್ಕೆ ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ತಿಳಿಸಿದೆ.
ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಇರಿಸಲಾಗಿರುವ ಮೂಲ ನಿಧಿಯಲ್ಲಿ ಅಲ್ಪ ಭಾಗವನ್ನು ವಿರಳ ಕಾಯಿಲೆ ಎದುರಿಸುತ್ತಿರುವ ಮಕ್ಕಳ ಚಿಕಿತ್ಸೆಗೆ ಬಳಸಬೇಕು ಎಂದು ಐಜಿಐಸಿಎಚ್ ನಿರ್ದೇಶಕ ಡಾ.ಕೆ.ಎಸ್. ಸಂಜಯ್ ಅವರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ನಿರ್ದೇಶನ ನೀಡಿದ್ದಾರೆ.
ಆನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ನೆರವಾಗುವಂತೆ ಕಾರ್ಪೊರೇಟ್ ಸಂಸ್ಥೆಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ವಿರಳ ಕಾಯಿಲೆ ಪೀಡಿತರ ಕುಟುಂಬಸ್ಥರು ಆರ್ಥಿಕ ನೆರವಿನ ನಿರೀಕ್ಷೆಯಲ್ಲಿ ಇರುವ ಬಗ್ಗೆ ‘ಏರುತ್ತಲೇ ಇದೆ ಚಿಕಿತ್ಸಾ ವೆಚ್ಚ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಫೆ.26ರಂದು ವಿಶೇಷ ವರದಿ ಪ್ರಕಟವಾಗಿತ್ತು.
‘ಲೈಸೋಸೋಮಲ್ ಸ್ಟೋರೇಜ್ ಎಂಬ ವಿರಳ ಕಾಯಿಲೆಯ ಚಿಕಿತ್ಸೆಗೆ ವಾರ್ಷಿಕ ಪ್ರತಿ ರೋಗಿಗೆ ₹20 ಲಕ್ಷದಿಂದ ₹40 ಲಕ್ಷದವರೆಗೆ ವೆಚ್ಚವಾಗಲಿದೆ. ರಾಜ್ಯದಲ್ಲಿ ಈ ರೀತಿಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳ ಚಿಕಿತ್ಸೆಗೆ ವಾರ್ಷಿಕ ₹12 ಕೋಟಿಯಿಂದ ₹13 ಕೋಟಿ ಅನುದಾನ ಅವಶ್ಯಕತೆ ಇದೆ. ಈ ದುಬಾರಿ ವೆಚ್ಚದ ಚಿಕಿತ್ಸೆಗೆ ಕಾರ್ಪೊರೇಟ್ ಸಂಸ್ಥೆಗಳು ದೇಣಿಗೆ ನೀಡುವುದರ ಮೂಲಕ ಒಂದು ಮಗುವನ್ನು ದತ್ತು ಪಡೆದುಕೊಳ್ಳಲಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.