ADVERTISEMENT

ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 15:43 IST
Last Updated 9 ಜುಲೈ 2025, 15:43 IST
<div class="paragraphs"><p>ಎನ್. ರವಿಕುಮಾರ್</p></div>

ಎನ್. ರವಿಕುಮಾರ್

   

ಬೆಂಗಳೂರು: ‘ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂಬ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ರವಿಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಬುಧವಾರ ವಿಚಾರಣೆ ನಡೆಸಿದರು.

ADVERTISEMENT

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್‌ ಶ್ಯಾಮ್‌ ವಾದ ಆಲಿಸಿದ ನ್ಯಾಯಾಧೀಶರು ‘ಅರ್ಜಿದಾರ ಆರೋಪಿಯು 10 ದಿನಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಮತ್ತು ಒಂದು ವೇಳೆ ಪೊಲೀಸರು ಅವರನ್ನು ಬಂಧಿಸಿದ್ದೇ ಆದರೆ ₹1 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್‌ ಪಡೆದು ಬಿಡುಗಡೆ ಮಾಡಬೇಕು’ ಎಂದು ಷರತ್ತು ವಿಧಿಸಿ ಅರ್ಜಿ ವಿಲೇವಾರಿ ಮಾಡಿದೆ.

ಪ್ರಕರಣವೇನು?: ‘ಬಿಜೆಪಿಯಿಂದ ಜುಲೈ 1ರಂದು ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರವಿಕುಮಾರ್ ಅವರು ಶಾಲಿನಿ ರಜನೀಶ್‌ ಕುರಿತು ಅಸಂಸದೀಯ ಪದ ಬಳಸಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಜೆ.ಪಿ.ನಗರದ ನಿವಾಸಿ ‘ನಂದಾದೀಪಾ ಮಹಿಳಾ ಸಂಘ’ದ ಅಧ್ಯಕ್ಷೆ ನಗರ್ತನಾ ನೀಡಿದ ದೂರಿನಡಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.