ಹೈಕೋರ್ಟ್
ಬೆಂಗಳೂರು: ‘ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಸಾವು ಕಂಡ ಘಟನೆಗೆ ಸಂಬಂಧಿಸಿದಂತೆ ಬಂಧಿಸಲಾಗಿರುವ ನಮ್ಮನ್ನು ಬಿಡುಗಡೆ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿ ಆರ್‌ಸಿಬಿ ಮತ್ತು ಡಿಎನ್‌ಎ ಪದಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಬಿಡುಗಡೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆರ್‌ಸಿಬಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸಲೆ ಪರ ಅವರ ಪತ್ನಿ ಮಾಳವಿಕಾ ನಾಯಕ್, ಮೆಸರ್ಸ್ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ನಿರ್ದೇಶಕ ಆರ್.ಸುನಿಲ್ ಮ್ಯಾಥ್ಯೂ ಪರವಾಗಿ ಅವರ ಪತ್ನಿ ರೋಶನಿ ಸುನಿಲ್, ಎಸ್.ಕಿರಣ್ ಕುಮಾರ್ ಪರವಾಗಿ ಅವರ ಪತ್ನಿ ಕೆ.ನಂದಿನಿ ಮತ್ತು ಎನ್.ಪಿ.ಶಮಂತ್ ಅವರ ತಾಯಿ ನಿರ್ಮಲಾ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಪ್ರಕರಣ ಸಂಬಂಧ ಬುಧವಾರ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಮಧ್ಯಂತರ ಆದೇಶವನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರು ಗುರುವಾರ ಮಧ್ಯಾಹ್ನ ಪ್ರಕಟಿಸಿತು.
ಅರ್ಜಿದಾರರು ತಮ್ಮ ಪಾಸ್‌ಪೋರ್ಟ್ ಅನ್ನು ಒಪ್ಪಿಸುವಂತೆ ನ್ಯಾಯಪೀಠ ಷರತ್ತು ವಿಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.