ADVERTISEMENT

ಬೆಂಗಳೂರು ಕಾಲ್ತುಳಿತ: ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 13:34 IST
Last Updated 28 ಜುಲೈ 2025, 13:34 IST
<div class="paragraphs"><p>ಪಿಟಿಐ</p></div>
   

ಪಿಟಿಐ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಲ್ಲಿ ಪೊಲೀಸ್ ಕಮಿಷನರ್ ಬಿ.ದಯಾನಂದ ಸೇರಿ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಹೆಚ್ಚುವರಿ ಪೊಲೀಸ್‌ ಕಮಿಷನರ್ ವಿಕಾಸ್‌ ಕುಮಾರ್‌ ವಿಕಾಸ್‌, ಕೇಂದ್ರ ವಿಭಾಗದ ಡಿಸಿಪಿ ಟಿ. ಶೇಖರ್‌, ಕಬ್ಬನ್‌ ಪಾರ್ಕ್‌ ಎಸಿಪಿ ಸಿ. ಬಾಲಕೃಷ್ಣ ಮತ್ತು ಇನ್‌ಸ್ಪೆಕ್ಟರ್ ಎ.ಕೆ. ಗಿರೀಶ್‌ ಅವರ ಅಮಾನತು ವಾಪಸ್‌ ಪಡೆಯಲಾಗಿದೆ. ಈ ಎಲ್ಲ‌ ಅಧಿಕಾರಿಗಳ ಮೇಲೆ ನಿಯಮಾನುಸಾರ ಶಿಸ್ತುಕ್ರಮ ಬಾಕಿಯಿರಿಸಿ, ತಕ್ಷಣದಿಂದ ಕರ್ತವ್ಯಕ್ಕೆ ಮರಳಿ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ADVERTISEMENT

ಜೂನ್‌ 4ರಂದು ನಡೆದಿದ್ದ ಕಾಲ್ತುಳಿತ ಘಟನೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರವು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದ ಮ್ಯಾಜಿಸ್ಟ್ರಿ‌ಯಲ್‌ ತನಿಖಾ ತಂಡ ಮತ್ತು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಕುನ್ಹ ನೇತೃತ್ವದ ಏಕ ಸದಸ್ಯ ಆಯೋಗವನ್ನು ರಚಿಸಿತ್ತು. ಏಕ ಸದಸ್ಯ ಆಯೋಗ ಜುಲೈ 10ರಂದು ಹಾಗೂ ಮ್ಯಾಜಿಸ್ಟ್ರಿ‌ಯಲ್‌ ತನಿಖಾ ತಂಡ 11ರಂದು ವರದಿ ಸಲ್ಲಿಸಿದೆ. ಅಲ್ಲದೆ, ಈ ಅಧಿಕಾರಿಗಳು ತಮ್ಮ ಅಮಾನತು ಹಿಂಪಡೆಯುವಂತೆ ಜುಲೈ 27ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ಈ ಕಾರಣಗಳಿಗೆ ಮರು ಪರಿಶೀಲಿಸಿ, ಕ್ರಮ ತೆಗೆದುಕೊಳ್ಳಲಾಗಿದೆ ಎಂದೂ ಆದೇಶದಲ್ಲಿ ವಿವರಿಸಲಾಗಿದೆ.

ತಮ್ಮನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ವಿಕಾಸ್‌ ಅವರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಗೆ (ಸಿಎಟಿ) ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮಂಡಳಿ, ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿತ್ತು. ಈ ಪ್ರಕರಣ ವಿಚಾರಣಾ ಹಂತದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.