ಬೆಂಗಳೂರು: ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಈ ದುರಂತವನ್ನು ಕ್ರಿಕೆಟ್ ಅಸೋಸಿಯೇಶನ್ ಅಥವಾ ನಾವು ನಿರೀಕ್ಷಿಸಿರಲಿಲ್ಲ. ಕಾಲ್ತುಳಿತದಿಂದ ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೌರಿಂಗ್ ಮತ್ತು ವೈದೇಹಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಾಯಗೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ನೆರವನ್ನು ಸರ್ಕಾರ ನೀಡಲಿದೆ’ ಎಂದರು.
‘ವಿಜಯೋತ್ಸವ ಕಾರ್ಯಕ್ರಮವನ್ನು ಕ್ರಿಕೆಟ್ ಅಸೋಸಿಯೇಶನ್‌ನವರು ಹಮ್ಮಿಕೊಂಡಿದ್ದರು. ಸರ್ಕಾರದ ವತಿಯಿಂದ ವಿಧಾನಸೌಧದ ಎದುರು ಕಾರ್ಯಕ್ರಮ ಆಯೋಜಿಸಲಾಗಿತ್ತು. ನಮ್ಮ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರೂ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ’ ಎಂದರು.
‘ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಕ್ರಿಕೆಟ್ ಸ್ಟೇಡಿಯಂನಲ್ಲಿ 35 ಸಾವಿರ ಜನರು ಕುಳಿತುಕೊಳ್ಳಲು ವ್ಯವಸ್ಥೆಯಿದೆ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಆದರೆ, 2 ಲಕ್ಷದಿಂದ 3 ಲಕ್ಷ ಜನರು ಬಂದಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ’ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.