ಬೆಂಗಳೂರು: ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಉಂಟಾದ ಸಾವು– ನೋವು ಪ್ರಕರಣದ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು, ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾಲ್ತುಳಿತ ಸಂಭವಿಸಿದ ವಿವಿಧ ಗೇಟ್‌ಗಳ ಬಳಿ ತೆರಳಿ ದುರಂತಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಿದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಕಚೇರಿಗೂ ತನಿಖಾಧಿಕಾರಿಗಳು ಭೇಟಿ ಕೊಟ್ಟಿದ್ದರು.
ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿದ ಬೆನ್ನಲ್ಲೇ ವಿಶೇಷ ತನಿಖಾ ದಳದ ಎಸ್‌ಪಿ ಶುಭನ್ವಿತಾ, ಡಿವೈಎಸ್ಪಿಗಳಾದ ಪುರುಷೋತ್ತಮ್, ಗೌತಮ್ ಅವರ ನೇತೃತ್ವದ ತಂಡವು ತನಿಖೆ ಆರಂಭಿಸಿದೆ.
‘ಆರ್‌ಸಿಬಿಯ ಮಾರುಕಟ್ಟೆ ವಿಭಾಗದ ಮುಖಸ್ಥ ನಿಖಿಲ್ ಸೋಸಲೆ, ಡಿಎನ್‌ಎ ಮ್ಯಾನೇಜ್‌ಮೆಂಟ್ (ಇವೆಂಟ್ ಮ್ಯಾನೇಜ್‌ಮೆಂಟ್) ಸಿಬ್ಬಂದಿ ಸುನಿಲ್ ಮ್ಯಾಥ್ಯು, ಕಿರಣ್ ಮತ್ತು ಸುಮಂತ್ ಎಂಬುವವರನ್ನು ಕೇಂದ್ರ ಅಪರಾಧ ದಳ ಹಾಗೂ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದರು. ನಾಲ್ವರು ಆರೋಪಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದು, ಅವರನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು. ಈ ಸಂಬಂಧ ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗುವುದು’ ಎಂದು ಸಿಐಡಿ ಮೂಲಗಳು ತಿಳಿಸಿವೆ.
‘ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ‘ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ’ಯ(ಕೆಎಸ್‌ಸಿಎ) ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಾಲಯದ ಮುಂದಿನ ಆದೇಶ ನೋಡಿಕೊಂಡು ಕೆಎಸ್‌ಸಿಎ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ನಡೆಸಲಾಗುವುದು’ ಎಂದು ತನಿಖಾ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.