ADVERTISEMENT

ಬೆಂಗಳೂರು ಕಾಲ್ತುಳಿತ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ HC ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 23:30 IST
Last Updated 13 ಆಗಸ್ಟ್ 2025, 23:30 IST
<div class="paragraphs"><p>ಪಿಟಿಐ</p></div>
   

ಪಿಟಿಐ

ಬೆಂಗಳೂರು: ‘ಬೆಂಗಳೂರು ರಾಯಲ್‌ ಚಾಲೆಂಜರ್ಸ್‌ (ಆರ್‌ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ವಿಚಾರಣಾ ಆಯೋಗದ ವರದಿ ರದ್ದುಪಡಿಸಲು ಕೋರಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಸಂಬಂಧ ‘ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌’ ನಿರ್ದೇಶಕ ಸುನಿಲ್‌ ಮ್ಯಾಥ್ಯೂ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಜಯಂತ್‌ ಬ್ಯಾನರ್ಜಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ನ್ಯಾ.ಕುನ್ಹ ಆಯೋಗವು ಅರ್ಜಿದಾರರ ವಾದ ಆಲಿಸದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ಪಾಟಿ ಸವಾಲು ನಡೆಸಲು ಅವಕಾಶ ನೀಡದೆ ಏಪಕ್ಷೀಯ ವಾದ ಆಲಿಕೆ ಮಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಿಲ್ಲ. ಆದರೆ, ಈ ವರದಿ ಸುದ್ದಿ ಮಾಧ್ಯಮಗಳಿಗೆ ಸೋರಿಕೆಯಾಗಿದೆ. ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳಿಂದ ಅರ್ಜಿದಾರರ ಘನತೆಗೆ ಧಕ್ಕೆಯಾಗಿದೆ’ ಎಂದು ಆಕ್ಷೇಪಿಸಿದರು.

ಇದನ್ನು ತಳ್ಳಿ ಹಾಕಿದ ಸರ್ಕಾರದ ಪರ ಹಾಜರಿದ್ದ ಅಡ್ವೋಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ‘ಸದ್ಯಕ್ಕೆ ನ್ಯಾ.ಕುನ್ಹ ವರದಿಯನ್ನು ಬಹಿರಂಗಪಡಿಸುವುದಿಲ್ಲ. ಹಾಗಾಗಿ, ವರದಿ ಬಗ್ಗೆ ನ್ಯಾಯಪೀಠ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಬಾರದು’ ಎಂದು ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ನ್ಯಾ.ಕುನ್ಹ ವರದಿಗೆ ತಡೆ ನೀಡಬೇಕು. ತನಿಖೆ ಆಧರಿಸಿ ಯಾವುದೇ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿ ಕುರಿತು ಯಾವುದೇ ಆದೇಶ ಹೊರಡಿಸುವ ಅಗತ್ಯವಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು. ಅಂತೆಯೇ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.