ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಅಫಜಲಪುರದ ಆರ್.ಡಿ. ಪಾಟೀಲ ಅವರನ್ನು ಸಿಐಡಿ ಅಧಿಕಾರಿಗಳು ಮತ್ತೆ ಏಳು ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಜೂನಿಯರ್ ಎಂಜಿನಿಯರ್ ಮತ್ತು ಸಹಾಯಕ ಎಂಜಿನಿಯರ್ ನೇಮಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಕುರಿತು ಎಫ್‌ಐಆರ್ ದಾಖಲಿಸಿಕೊಂಡಿದ್ದ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ ಕರೆದೊಯ್ದಿದ್ದರು. ಇದೀಗ ನಗರದ ಎಂ.ಎಸ್. ಇರಾನಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪಿಎಸ್‌ಐ ಪರೀಕ್ಷೆಯಲ್ಲಿ ಬ್ಲೂಟೂತ್ ಮೂಲಕ ಅಕ್ರಮ ನಡೆಸಲು ನೆರವಾಗಿದ್ದ ಆರೋಪದ ಮೇರೆಗೆ ಸಿಐಡಿ ಅಧಿಕಾರಿಗಳು ಮತ್ತೆ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಿಂದ ಆರ್.ಡಿ. ಪಾಟೀಲ ಅವರನ್ನು ಕರೆತಂದ ಬಳಿಕ ಹೆಚ್ಚಿನ ತನಿಖೆಗಾಗಿ ತಮ್ಮ ವಶಕ್ಕೆ ನೀಡುವಂತೆ ಸಿಐಡಿ ಅಧಿಕಾರಿಗಳು ಇಲ್ಲಿನ ಪ್ರಧಾನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡರು. ಮನವಿ ಪುರಸ್ಕರಿಸಿದ ನ್ಯಾಯಾಧೀಶ ಸಂತೋಷ ಶ್ರೀವಾಸ್ತವ ಅವರು ಏಳು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದರು.
ಎಂ.ಎಸ್. ಇರಾನಿ ಕಾಲೇಜಿನ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಗರದ ಪ್ರಭು ಎಂಬ ಅಭ್ಯರ್ಥಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದ. ಆತನ ಹೆಸರು ಪಿಎಸ್‌ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿತ್ತು. ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದಾಗ ಈ ಕೃತ್ಯದಲ್ಲಿ ಆರ್.ಡಿ. ಪಾಟೀಲ ಪಾತ್ರ ಇರುವುದರ ಕುರಿತು ಪ್ರಭು ಬಾಯಿ ಬಿಟ್ಟಿದ್ದ. ಹೀಗಾಗಿ, ಪಾಟೀಲ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಎಂ.ಎಸ್.ಇರಾನಿ ಪರೀಕ್ಷಾ ಕೇಂದ್ರದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಈಗಾಗಲೇ ಅಭ್ಯರ್ಥಿ ಪ್ರಭು, ಆತನ ತಂದೆ ಶರಣಪ್ಪ ಹಾಗೂ ಈ ವ್ಯವಹಾರಕ್ಕೆ ನೆರವು ನೀಡಿದ ಆರೋಪದ ಮೇರೆಗೆ ಲೆಕ್ಕ ಪರಿಶೋಧಕ ಚಂದ್ರಕಾಂತ ಕುಲಕರ್ಣಿ ಎಂಬುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.