ಲಹರ್ ಸಿಂಗ್ ಸಿರೋಯಾ
(ಪ್ರಜಾವಾಣಿ ಚಿತ್ರ)
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದಿಸಿರುವ ಜಿಎಸ್‌ಟಿ ಸುಧಾರಣೆಗಳು, ರಾಜ್ಯದ ಜನರನ್ನು ಸಂಪೂರ್ಣವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಸಂಸದ ಲಹರ್ ಸಿಂಗ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೊಂದಿಗೆ ಮಾಡಿದಂತೆ, ಜನರಿಗೆ ಪ್ರಯೋಜನದಲ್ಲಿ ವ್ಯತ್ಯಯ ಉಂಟಾಗುವಂತೆ, ರಾಜ್ಯ ಮಟ್ಟದಲ್ಲಿ ಹೆಚ್ಚುವರಿ ತೆರಿಗೆಗಳನ್ನು ಚಾಲಾಕಿತನದಿಂದ ಹೇರಬಾರದು. ಜಿಎಸ್‌ಟಿ ಸುಧಾರಣೆಗಳು ರಾಜ್ಯದ ಆದಾಯ ನಷ್ಟಕ್ಕೆ ಕಾರಣವಾಗುತ್ತದೆ ಎಂದು ಹೇಳುವ ಮೂಲಕ ರಾಜ್ಯ ಸರ್ಕಾರ ಈಗಾಗಲೇ ಹೆಚ್ಚುವರಿ ತೆರಿಗೆ ಹೇರಲು ಪೂರಕ ವಾದ ಮಂಡಿಸುತ್ತಿರುವಂತೆ ತೋರುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರತಿಯೊಬ್ಬ ನಾಗರಿಕ ಮತ್ತು ಗ್ರಾಹಕರಿಗೆ ಪ್ರಯೋಜನ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಜಿಎಸ್‌ಟಿ ಸುಧಾರಣೆಗಳನ್ನು ಯಾವುದೇ ರೀತಿಯಲ್ಲಿ ದುರ್ಬಲಗೊಳಿಸಬಾರದು. ಆದಾಯ ನಷ್ಟ ಮತ್ತು ಸಹಕಾರ ಒಕ್ಕೂಟ ವ್ಯವಸ್ಥೆ ವಿಷಯವನ್ನು ಯಾವಾಗಲೂ ಎತ್ತುವ ರಾಜ್ಯ ಸರ್ಕಾರ, ತಮ್ಮ ಗ್ಯಾರಂಟಿ ಯೋಜನೆಗಳ ಹೊರೆಯು, ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಹೇಗೆ ಹಾಳು ಮಾಡಿದೆ ಎನ್ನುವುದರ ಬಗ್ಗೆ ಮಾತನಾಡುವುದಿಲ್ಲ. ಈಗ ಜಿಎಸ್‌ಟಿಯಲ್ಲಿ ಸುಧಾರಣೆಗಳಾದಂತೆ, ರಾಜ್ಯ ಸರ್ಕಾರ ಕೂಡ ತನ್ನ ಗ್ಯಾರಂಟಿ ಯೋಜನೆಗಳಲ್ಲಿ ಸುಧಾರಣೆ ತರುವ ಬಗ್ಗೆ ಆಲೋಚಿಸಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಒಂದು ಕೈಯಿಂದ ಉದಾರವಾಗಿ ನೀಡಿದಂತೆ ಮಾಡಿ, ಇನ್ನೊಂದು ಕೈಯಿಂದ ಕಿತ್ತುಕೊಳ್ಳುತ್ತಿದ್ದು, ಈಗಲಾದರೂ ಜನರನ್ನು ಮೂರ್ಖರನ್ನಾಗಿ ಮಾಡುವುದನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.