ADVERTISEMENT

ಶಾಲಾ ಶಿಕ್ಷಕರ ನೇಮಕಾತಿ ತಂದೆಯ ಆದಾಯ ಪರಿಗಣನೆ: ಅರ್ಜಿ ತಿರಸ್ಕರಿಸಿದ ಕೆಎಟಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2023, 19:52 IST
Last Updated 4 ಡಿಸೆಂಬರ್ 2023, 19:52 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ‘ಪ್ರಾಥಮಿಕ ಶಾಲಾ ಶಿಕ್ಷಕರ 13 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸುವುದಕ್ಕೆ ನಮಗೂ ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು‘ ಎಂದು ಕೋರಲಾಗಿದ್ದ ಅರ್ಜಿಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ತಿರಸ್ಕರಿಸಿದೆ.

ಈ ಸಂಬಂಧ ಬೆಂಗಳೂರಿನ ವಿದ್ಯಾರಣ್ಯಪುರದ ಎಂ.ನಳಿನಾ ಸೇರಿದಂತೆ ಒಟ್ಟು ಐವರು ಮಹಿಳೆಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮಂಡಳಿಯ ನ್ಯಾಯಾಂಗ ಸದಸ್ಯ ನಾರಾಯಣ ಮತ್ತು ಆಡಳಿತ ಸದಸ್ಯ ಎನ್.ಸಿವಶೈಲಂ ಅವರಿದ್ದ ಪೀಠವು ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ADVERTISEMENT

‘ಅರ್ಜಿದಾರರ ಮನವಿಗಳನ್ನು ಮಾನ್ಯ ಮಾಡಲು ಅವರು ಯಾವುದೇ ಅಗತ್ಯ ಕಾನೂನಾತ್ಮಕ ದಾಖಲೆ ಅಥವಾ ಆಧಾರಗಳನ್ನು ನ್ಯಾಯಮಂಡಳಿಗೆ ಒದಗಿಸಿಲ್ಲ. ಅಂತೆಯೇ, ಈ ಪ್ರಕರಣದಲ್ಲಿನ ವಿವಾಹಿತ ಮಹಿಳೆಯರು ಕ್ರಮವಾಗಿ ತಮ್ಮ ಪತಿಯಂದಿರ ಜತೆ ಪ್ರತ್ಯೇಕ ಕುಟುಂಬದೊಂದಿಗೆ ವಾಸ ಮಾಡುತ್ತಿದ್ದು, ಪೋಷಕರ ಜತೆಗಿನ ಕೂಡು ಕುಟುಂಬದಲ್ಲಿ ವಾಸ ಮಾಡುತ್ತಿಲ್ಲ. ಹಾಗಾಗಿ, ಈ ಅಭ್ಯರ್ಥಿಗಳ ಮನವಿ ಪುರಸ್ಕರಿಸಲು ಆಗದು‘ ಎಂದು ಆದೇಶದಲ್ಲಿ ತಿಳಿಸಿದೆ.

‘ಕರ್ನಾಟಕ ರಾಜ್ಯ ಮತ್ತು ಯೋಗೇಶ್ವರಿ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌, ಪೋಷಕರ ಆದಾಯ ಪ್ರಮಾಣ ಪತ್ರವನ್ನೇ ಪರಿಗಣಿಸಬೇಕೆಂದು ಆದೇಶಿಸಿದೆ. ಹಾಗಾಗಿ, ಈ ಪ್ರಕರಣದಲ್ಲೂ ತಂದೆಯ ಆದಾಯ ಪ್ರಮಾಣ ಪತ್ರವನ್ನು ಪರಿಗಣಿಸಿ ನಮ್ಮ ಹೆಸರನ್ನು ಆಯ್ಕೆ ಪಟ್ಟಿಯಲ್ಲಿ ಸೇರಿಸಬೇಕು ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಬೇಕು‘ ಎಂದು ಅರ್ಜಿದಾರರು ಕೋರಿದ್ದರು.

ಪ್ರಕರಣವೇನು?: ‘ವಿವಾಹಿತ ಮಹಿಳೆಯರು ಪತಿಯ ಆದಾಯದ ಆಧಾರದಡಿ ತಮ್ಮ ಆದಾಯ ಪ್ರಮಾಣ ಪತ್ರವನ್ನು ನೇಮಕಾತಿ ವೇಳೆ ಸಲ್ಲಿಸಬೇಕಿತ್ತು. ಅದರ ಬದಲು, ತಂದೆಯ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ‘ ಎಂಬ ಕಾರಣ ನೀಡಿ 451 ಅಭ್ಯರ್ಥಿಗಳನ್ನು ತಾತ್ಕಾಲಿಕ ಆಯ್ಕೆ ಪಟ್ಟಿಯಿಂದ ಕೈಬಿಡಲಾಗಿತ್ತು. ಇದನ್ನು ಪ್ರಶ್ನಿಸಿ, ಅರ್ಜಿದಾರ ಅಭ್ಯರ್ಥಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಪ್ರಕರಣದಲ್ಲಿನ ಮೇಲ್ಮನವಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ನೇಮಕಾತಿ ಪ್ರಕ್ರಿಯೆ ಮುಂದುವರಿಸಿ‘ ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಅಂತೆಯೇ, ’ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 451 ಅಭ್ಯರ್ಥಿಗಳನ್ನು ಹೊರಗಿಡಲಾಗಿದೆ. ಈ ಅಭ್ಯರ್ಥಿಗಳು ತಮ್ಮ ತಕರಾರನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ (ಕೆಎಸ್‌ಎಟಿ) ಮುಂದೆ ಮಂಡಿಸಿ ಸೂಕ್ತ ನ್ಯಾಯ ಪಡೆಯಬಹುದು. ಆದರೆ, ಅದು ಕೆಎಸ್‌ಎಟಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ‘ ಎಂದು ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.