ADVERTISEMENT

ನರೇಗಾ ಅನುದಾನ ಬಿಡುಗಡೆ ಮಾಡಿ: ಕೇಂದ್ರ ಸರ್ಕಾರಕ್ಕೆ ಪ್ರಿಯಾಂಕ್‌ ಖರ್ಗೆ ಪತ್ರ

​ಪ್ರಜಾವಾಣಿ ವಾರ್ತೆ
Published 25 ಮೇ 2025, 16:26 IST
Last Updated 25 ಮೇ 2025, 16:26 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ   

ಬೆಂಗಳೂರು: ‘ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿ, 2025–26ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಪರಿಣಾಮವಾಗಿ ಸಾಮಗ್ರಿ ವೆಚ್ಚ ಮತ್ತು ಕೂಲಿ ಭರಿಸಲು ತೊಡಕು ಎದುರಾಗಿದೆ. ಕೂಡಲೇ ಅನುದಾನವನ್ನು ಬಿಡುಗಡೆ ಮಾಡಿ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಪ್ರಿಯಾಂಕ್‌ ಖರ್ಗೆ, ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈವರೆಗೆ ಸಾಮಗ್ರಿ ವೆಚ್ಚ ಮತ್ತು ಅನುದಾನ ಬಿಡುಗಡೆಯಾಗಿಲ್ಲ. ಪರಿಣಾಮವಾಗಿ ₹787.20 ಕೊಟಿ ಮೊತ್ತದ ಬಿಲ್‌ಗಳು ಬಾಕಿಯಾಗಿವೆ. ಜತೆಗೆ ₹600 ಕೋಟಿಯಷ್ಟು ವೇತನ ಪಾವತಿಯಾಗಿಲ್ಲ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಂಡು ಬಾಕಿ ಇರುವ ವೇತನ, ಸಾಮಗ್ರಿ ಮತ್ತು ಆಡಳಿತಾತ್ಮಕ ನಿಧಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯದ ಭದ್ರತೆ ಒದಗಿಸುವಲ್ಲಿ ಈ ಯೋಜನೆಯು ಮಹತ್ವದ ಪಾತ್ರ ವಹಿಸಿದೆ. ರಾಜ್ಯ ಸರ್ಕಾರವು ಯೋಜನೆಯ ಅನುಷ್ಠಾನಕ್ಕೆ ಬದ್ಧವಾಗಿದೆ. ಈವರೆಗೆ ಕೈಗೊಂಡಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಬಳಕೆ ಪ್ರಮಾಣಪತ್ರಗಳು ಮತ್ತು ದಾಖಲೆಗಳನ್ನು ನಿಮ್ಮ ಸಚಿವಾಲಯಕ್ಕೆ ಸಲ್ಲಿಸಿದ್ದೇವೆ. ಹೀಗಿದ್ದೂ ಹಣ ಬಿಡುಗಡೆಯಾಗಿಲ್ಲ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ADVERTISEMENT

‘ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಬಾಕಿ ಇರುವ ಅನುದಾನವನ್ನು ನೀವು ಬಿಡುಗಡೆ ಮಾಡುತ್ತೀರಿ ಎಂದು ನಿರೀಕ್ಷಿಸಿದ್ಧೇವೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.