ADVERTISEMENT

ಸರ್ಕಾರಿ ಶಾಲೆಗಳ ಮರುರೂಪಿಸಿ: ದೊರೆಸ್ವಾಮಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 18:50 IST
Last Updated 16 ಫೆಬ್ರುವರಿ 2022, 18:50 IST
ಪ್ರೊ.ಎಂ.ಆರ್‌. ದೊರೆಸ್ವಾಮಿ
ಪ್ರೊ.ಎಂ.ಆರ್‌. ದೊರೆಸ್ವಾಮಿ   

ಬೆಂಗಳೂರು: ‘ಸರ್ಕಾರಿ ಶಾಲೆಗಳನ್ನು ಆದ್ಯತೆಯ ಮೇರೆಗೆ ಮರುರೂಪಿಸಲು ಬಜೆಟ್‌ನಲ್ಲಿ ಸರ್ಕಾರ ದಿಟ್ಟ ಕ್ರಮಗಳನ್ನು ಪ್ರಕಟಿಸಬೇಕು’ ಎಂದು ಪಿಇಎಸ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎಂ.ಆರ್‌. ದೊರೆಸ್ವಾಮಿ ಸಲಹೆ ನೀಡಿದ್ದಾರೆ.

‘ರಾಜ್ಯದ 48 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮರುರೂಪಿಸುವ ಅಗತ್ಯ ಇದೆ. ಮೂಲಸೌಕರ್ಯ, ಶಿಕ್ಷಕ–ವಿದ್ಯಾರ್ಥಿ ಅನುಪಾತ, ಶೈಕ್ಷಣಿಕ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದ ಅಂಶಗಳನ್ನು ವಿಶ್ಲೇಷಿಸಿದಾಗ ಸರ್ಕಾರಿ ಶಾಲೆಗಳ ಸ್ಥಿತಿ ಬದಲಾಗದಿರುವುದು ದುರದೃಷ್ಟಕರ. ಸ್ವಾತಂತ್ರ್ಯ ದೊರೆತು ಏಳು ದಶಕಗಳು ಶಾಲೆಗಳ ಪರಿಸ್ಥಿತಿ ಸುಧಾರಿಸಿಲ್ಲ’ ಎಂದು ಅವರು ಹೇಳಿದ್ದಾರೆ.

‘ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಕೈಗೊಂಡಿರುವ ಉಪಕ್ರಮಗಳು ಗಮನಾರ್ಹವಾದುದು. ಆಂಧ್ರಪ್ರದೇಶ ಸರ್ಕಾರವು ಸಮಗ್ರ ಶಾಲಾ ಅಭಿವೃದ್ಧಿ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಿದೆ. ಇದೇ ರೀತಿ ತೆಲಂಗಾಣ ಸರ್ಕಾರವು ₹7,289 ಕೋಟಿ ಅನುದಾನದ ಅಡಿ ‘ಮನ ಊರು ಮನ ಬಡಿ’ ಯೋಜನೆ ಅಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಇದೇ ತಿಂಗಳಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ’ ಎಂದು ಅವರು ವಿವರಿಸಿದ್ದಾರೆ.

ADVERTISEMENT

‘ಕರ್ನಾಟಕ ರಾಜ್ಯವು ಜಾಗತಿಕವಾಗಿ ಶೈಕ್ಷಣಿಕ ನೆಲೆಯಾಗಿದೆ. ಹೀಗಾಗಿ, ದೇಶಕ್ಕೆ ನಾಯಕನ ಸ್ಥಾನದಲ್ಲಿದ್ದುಕೊಂಡು ದೆಹಲಿ ಶಾಲೆಗಳಂತೆ ಅಭಿವೃದ್ಧಿ ಮಾಡಬೇಕು. ಈ ನಿಟ್ಟಿನಲ್ಲಿ ಕಾರ್ಪೋರೇಟ್‌ ಸಾಮಾಜಿಕ ಹೊಣೆಗಾರಿಕೆ ಮೂಲಕ ಮತ್ತು ಸರ್ಕಾರೇತರ ಸಂಸ್ಥೆಗಳ ಬೆಂಬಲ ಪಡೆದು ಮುಖ್ಯಮಂತ್ರಿ ಅವರು ₹15 ಸಾವಿರ ಕೋಟಿಗಳನ್ನು ಅನುದಾನದ ರೂಪದಲ್ಲಿ ಬಿಡುಗಡೆ ಮಾಡಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.