ADVERTISEMENT

ರೆನ್ಯೂ ಪವರ್‌ನಿಂದ ರಾಜ್ಯದಲ್ಲಿ ₹50 ಸಾವಿರ ಕೋಟಿ ಹೂಡಿಕೆ ಒಪ್ಪಂದ

ದಾವೋಸ್‌ನಲ್ಲಿ ಮುಖ್ಯಮಂತ್ರಿ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ

​ಪ್ರಜಾವಾಣಿ ವಾರ್ತೆ
Published 24 ಮೇ 2022, 19:31 IST
Last Updated 24 ಮೇ 2022, 19:31 IST
ದಾವೋಸ್‌ನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಯಮಿ ಗೌತಮ್‌ ಅದಾನಿ ಅವರನ್ನು ಭೇಟಿ ಮಾಡಿದರು. ಬೃಹತ್ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಇದ್ದರು
ದಾವೋಸ್‌ನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಯಮಿ ಗೌತಮ್‌ ಅದಾನಿ ಅವರನ್ನು ಭೇಟಿ ಮಾಡಿದರು. ಬೃಹತ್ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಇದ್ದರು   

ಬೆಂಗಳೂರು: ನವೀಕರಿಸಬಹುದಾದ ಇಂಧನದ ಉತ್ಪಾದನೆಯಲ್ಲಿತೊಡಗಿರುವ ಅತ್ಯಂತ ದೊಡ್ಡ ಸಂಸ್ಥೆ ಯಾದ ರೆನ್ಯೂ ಪವರ್ ಕಂಪನಿಯು ರಾಜ್ಯದಲ್ಲಿ ಮುಂದಿನ ಏಳು ವರ್ಷಗಳಲ್ಲಿ ₹50 ಸಾವಿರ ಕೋಟಿ ಹೂಡಿಕೆ ಒಪ್ಪಂದಕ್ಕೆ ಸಹಿ ಮಾಡಿದೆ.

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಒಕ್ಕೂಟದ ವಾರ್ಷಿಕ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಕಂಪನಿಯ ಅಧ್ಯಕ್ಷ ಸಿಇಒ ಸುಮಂತ್ ಸಿನ್ಹಾ ಅವರು ಮಂಗಳವಾರ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಕಂಪನಿಯು ಮುಂದಿನ ಏಳು ವರ್ಷಗಳಲ್ಲಿ ನವೀಕರಿಸಬಹುದಾದಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಮೊದಲ ಹಂತದಲ್ಲಿ ಈಗಾಗಲೇ ಜಾರಿಯಲ್ಲಿರುವ ಯೋಜನೆಗಳಿಗೆ ₹11,900 ಕೋಟಿ ಬಂಡವಾಳ ಹೂಡಿಕೆ ಮಾಡಲಿದ್ದು, ಎರಡು ವರ್ಷಗಳಲ್ಲಿ ಈ ಯೋಜನೆ ಕಾರ್ಯಾರಂಭಗೊಳ್ಳಲಿದೆ. ಎರಡನೇಹಂತದಲ್ಲಿ ನವೀಕರಿಸ ಬಹುದಾದ ಇಂಧನ ಹಾಗೂ ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು ₹37,500 ಕೋಟಿ ಹೂಡಿಕೆ ಮಾಡಲಿದೆ. ಈ ಎರಡು ಹಂತದ ಯೋಜನೆಗಳಿಂದ ಸುಮಾರು 30 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ADVERTISEMENT

ದೇಶದ ಒಂಬತ್ತು ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪವನ, ಸೌರ ಹಾಗೂ ಹೈಡ್ರೋ ಇಂಧನ ಪ್ರಾಜೆಕ್ಟ್‌ಗಳನ್ನು ರೆನ್ಯೂ ಕಂಪನಿ ಹೊಂದಿದೆ. ಸದ್ಯ 12 ಗಿಗಾ ವ್ಯಾಟ್‌ನಷ್ಟು ಇಂಧನವನ್ನು ಈ ಸಂಸ್ಥೆ ಉತ್ಪಾದಿಸುತ್ತಿದೆ.

ಪ್ರಮುಖ ದತ್ತಾಂಶ ಕೇಂದ್ರ: ಇದಕ್ಕೂ ಮೊದಲು ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಭಾರ್ತಿ ಎಂಟರ್ ಪ್ರೈಸಸ್ ಅಧ್ಯಕ್ಷ ಹಾಗೂ ಸಿಇಒ ಸುನಿಲ್ ಭಾರ್ತಿ ಮಿತ್ತಲ್ ಅವರು ರಾಜ್ಯದಲ್ಲಿ ಇನ್ನೊಂದು ಪ್ರಧಾನ ದತ್ತಾಂಶ ಕೇಂದ್ರ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ರಾಜ್ಯ ಸರ್ಕಾರ ಅಗತ್ಯ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತು ಜಾನ್ಸನ್‌ ಕಂಟ್ರೋಲ್ಸ್‌ ಸಿಇಒ ಜಾರ್ಜ್‌ ಒಲಿವರ್‌ ಅವರ ಜೊತೆಗೂ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ ಅವಕಾಶಗಳ ಕುರಿತಂತೆ ಮುಖ್ಯಮಂತ್ರಿ ಚರ್ಚೆ ನಡೆಸಿದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಉನ್ನತ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.