ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ‘ನಿಯಮಿತ’ (ರೆಗ್ಯುಲರ್) ಜಾಮೀನು ಮಂಜೂರು ಮಾಡಿರುವ ಆದೇಶಗಳನ್ನು ಪ್ರಶ್ನಿಸಿ ನಗರ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ಹಿರಿಯ ವಕೀಲ ಅನಿಲ್ ನಿಶಾನಿ ಅವರು ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಅವರನ್ನು ನೇಮಿಸಲಾಗಿದೆ. ಅನಿಲ್ ಸಿ. ನಿಶಾನಿ ಹಾಗೂ ಹೈಕೋರ್ಟ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿತ್ತು.
ಡಿ.13ರಂದು ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ನಗರ ಪೊಲೀಸರು, ಗೃಹ ಇಲಾಖೆಗೆ ಪತ್ರ ಬರೆದಿದ್ದರು.
ಮೂರು ದಿನಗಳ ಹಿಂದೆಯಷ್ಟೇ ಗೃಹ ಇಲಾಖೆ ಅನುಮತಿ ನೀಡಿತ್ತು. ದಾಖಲೆ ಹಾಗೂ ಆರೋಪಪಟ್ಟಿಯಲ್ಲಿರುವ ಅಂಶಗಳನ್ನು ಅನುವಾದ ಮಾಡುವ ಕಾರ್ಯ ವಿಳಂಬವಾದ ಕಾರಣ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸುವ ಕಾರ್ಯ ತಡವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಹೈಕೋರ್ಟ್ ಜಾಮೀನು ನೀಡಿದ ಬಳಿಕ ನಟ ದರ್ಶನ್ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳಿ, ತಮ್ಮ ಫಾರ್ಮ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಕೋರ್ಟ್ ನೀಡಿದ್ದ ಗಡುವು ಜನವರಿ 5ಕ್ಕೆ ಅಂತ್ಯಗೊಂಡಿದೆ.
ಜೂನ್ 8 ರಂದು ಚಿತ್ರದುರ್ಗದ ರೇಣುಕಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ ಆರೋಪದಡಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಮಂದಿಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.