ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಅಭಿವೃದ್ಧಿ, ಅರಣ್ಯೀಕರಣ, ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ ತಿಳಿಸಿದ್ದಾರೆ.
ಇದಕ್ಕಾಗಿ ಆಯೋಗದ ಜಿಲ್ಲಾ ಮಟ್ಟದ ಸಮಿತಿಗಳನ್ನು ಬಲವರ್ಧನೆಗೊಳಿಸಿ, ಅಭಿವೃದ್ಧಿ ಕಾರ್ಯದಲ್ಲಿ ಸಮಿತಿಗಳನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.
‘ಹಿಂದೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ‘ಬಿಲ್ಡ್ ಆಪರೇಟ್ ಟ್ರಾನ್ಸ್‌ಫರ್’ ಆಧಾರದಲ್ಲಿ ಗ್ರಾಮೀಣ ರಸ್ತೆಗಳನ್ನು ನಿರ್ಮಿಸಲು ಸಲಹೆ ನೀಡಿದ್ದೆ. ಹೆಚ್ಚು ಖರ್ಚು ಇಲ್ಲದೆ ₹240 ಕೋಟಿ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಲಾಗಿತ್ತು. ಈಗಲೂ ಅದೇ ಮಾದರಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳನ್ನು ನಿರ್ಮಿಸಬೇಕಾಗಿದೆ’ ಎಂದರು.
ಹವಾಮಾನ ವೈಪರೀತ್ಯದಿಂದ ಹಲವು ಸಮಸ್ಯೆಗಳು ಆಗುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಶೇ 6ರಷ್ಟು ಮಾತ್ರ ಅರಣ್ಯವಿದೆ. ಆಳಂದದಲ್ಲಿ ಶೇ 1ರಷ್ಟು ಮಾತ್ರ ಅರಣ್ಯ ಇದೆ. ರಾಜ್ಯದಲ್ಲಿ ಕಾಡಿನ ಪ್ರಮಾಣ ಹೆಚ್ಚಿಸುವ ಅಗತ್ಯವಿದೆ. ಇದಕ್ಕಾಗಿ ಸಂಘ–ಸಂಸ್ಥೆಗಳು, ವಿದ್ಯಾರ್ಥಿಗಳ ಸಹಯೋಗವನ್ನು ಪಡೆಯಬೇಕಾಗಿದೆ. ಅರಣ್ಯ ಬೆಳೆಸುವ ಸಲುವಾಗಿ ಭೂಸುಧಾರಣಾ ಕಾಯ್ದೆಗೂ ತಿದ್ದುಪಡಿ ತರಬೇಕಾಗಿದೆ. ಈ ಕುರಿತು ಚರ್ಚೆ ಆಗಬೇಕಾಗಿದೆ ಎಂದು ಹೇಳಿದರು.
ಮುಂದಿನ ಆರ್ಥಿಕ ವರ್ಷದಲ್ಲಿ ಬಜೆಟ್ ಮಂಡಿಸುವುದಕ್ಕೂ ಮೊದಲೇ ರಾಜ್ಯದ ಆರ್ಥಿಕ, ಸಾಮಾಜಿಕ ಮತ್ತು ಇತರ ಪ್ರಮುಖ ವಲಯಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರಕ್ಕೆ ಆಯೋಗ ವಿಸ್ತೃತ ವರದಿಯೊಂದನ್ನು ಸಲ್ಲಿಸಲಿದೆ ಎಂದು ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.