ADVERTISEMENT

ಉದ್ಯೋಗ ಖಾತರಿ: 150 ದಿನಕ್ಕೆ ವಿಸ್ತರಿಸಲು ಕೋರಿ ಪತ್ರ ಬರೆಯಲು ಸಿಎಂ ಸೂಚನೆ

ಪರಿಶಿಷ್ಟ ಜಾತಿ, ಪಂಗಡ: ₹ 27 ಸಾವಿರ ಕೋಟಿ ಯೋಜನೆಗೆ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 28 ಮೇ 2020, 20:01 IST
Last Updated 28 ಮೇ 2020, 20:01 IST
   

ಬೆಂಗಳೂರು: ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿಗೆ ಪ್ರಸ್ತುತ ಇರುವ ಕನಿಷ್ಠ 100 ಕೆಲಸದ ದಿನಗಳನ್ನು 150ಕ್ಕೆ ಹೆಚ್ಚಿಸಲು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್‌ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್–19 ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಜಿಲ್ಲೆಗಳಿಗೆ 25 ಸಾವಿರದಿಂದ 30 ಸಾವಿರ ಜನ ಹಿಂದಿರುಗಿದ್ದಾರೆ. ಉದ್ಯೋಗ ಖಾತರಿ ಯೋಜನೆ ಕಾರ್ಯಕ್ರಮದಡಿ ಪ್ರತಿಯೊಂದು ಪರಿಶಿಷ್ಟ ಜಾತಿ, ಪಂಗಡದ ಕುಟುಂಬಕ್ಕೆ ಉದ್ಯೋಗ ಚೀಟಿಯನ್ನು ಕಡ್ಡಾಯವಾಗಿ ವಿತರಿಸುವಂತೆ ಸೂಚಿಸಿದರು.

2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯವರ ಅಭಿವೃದ್ಧಿಗಾಗಿ ₹ 19,432.22 ಕೋಟಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ₹ 8,267.30 ಕೋಟಿ ಸೇರಿ ಒಟ್ಟು ₹ 27,699.52 ಕೋಟಿ ಅನುದಾನ ಒದಗಿಸಲಾಗಿದ್ದು, ಎಲ್ಲಾ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಯಿತು.

ADVERTISEMENT

ನಿಗದಿತ ಅವಧಿಯೊಳಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರಸಕ್ತ ವರ್ಷದ ಪರಿಸ್ಥಿತಿಯನ್ನು ಗಮನಿಸಿ ಆರ್ಥಿಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಜನರಿಗೆ ಸಹಾಯವಾಗುವಂತಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ರಾಜ್ಯ ಅಭಿವೃದ್ಧಿ ಪರಿಷತ್ ಉಪಾಧ್ಯಕ್ಷರಾಗಿರುವ ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ.ಕಾರಜೋಳ ಮಾತನಾಡಿ, ಕೋವಿಡ್ 19 ಹಿನ್ನೆಲೆಯಲ್ಲಿ ಮಂಡಿಸಿರುವ ಬಜೆಟ್‍ಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಸಂಪನ್ಮೂಲ ಕ್ರೋಡೀಕರಣ ಹಾಗೂ ಅನುದಾನ ಲಭ್ಯತೆಯ ಆಧಾರದ ಮೇಲೆ ಕ್ರಿಯಾಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.