ನರೇಂದ್ರ ಮೋದಿ
ಪಿಟಿಐ ಚಿತ್ರ
ಬೆಂಗಳೂರು: ‘ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ. ಯಾಕೆಂದರೆ, ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು’ ಎಂದು ಲಗ್ನಪತ್ರಿಕೆಯಲ್ಲಿ ಮುದ್ರಿಸಿ ಮತ ಯಾಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
‘ನನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಆಲಂತಾಯ ಗ್ರಾಮದ ಶಿವಪ್ರಸಾದ್ ಮತ್ತು ಗೌಳಿತೊಟ್ಟು ಗ್ರಾಮದ ಎ.ಬಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹೈಕೋರ್ಟ್ ವಕೀಲ ಎಂ.ವಿನೋದ್ ಕುಮಾರ್, ‘ಚುನಾವಣೆಗೂ ಮುನ್ನವೇ ಲಗ್ನಪತ್ರಿಕೆ ಮುದ್ರಿಸಲಾಗಿತ್ತು. ಹೀಗಾಗಿ, ಆರೋಪವು ಅರ್ಜಿದಾರರಿಗೆ ಅನ್ವಯವಾಗುವುದಿಲ್ಲ’ ಎಂದು ಪೂರ್ವ ನಿರ್ಣಯಿತ; ಎಂ.ಇಷ್ತಿಯಾಕ್ ಅಹ್ಮದ್ ವರ್ಸಸ್ ರಾಜ್ಯ ಸರ್ಕಾರ ಹಾಗೂ ಅಟ್ಟಿಕಾ ಗೋಲ್ಡ್ ವರ್ಸಸ್ ರಾಜ್ಯ ಸರ್ಕಾರದ ಪ್ರಕರಣಗಳಲ್ಲಿ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ; ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 127Aಎ (ಕರಪತ್ರ, ಪೋಸ್ಟರ್ ಇತ್ಯಾದಿ ಮುದ್ರಣಕ್ಕೆ ನಿರ್ಬಂಧ) ಅಡಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.