ADVERTISEMENT

ಒಳ ಮೀಸಲು ಪ್ರಶ್ನಿಸಿ ರಿಟ್‌: ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2025, 15:52 IST
Last Updated 3 ನವೆಂಬರ್ 2025, 15:52 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳನ್ನು ಪ್ರವರ್ಗವಾರು ವರ್ಗೀಕರಿಸಿ ಒಳಮೀಸಲಾತಿ ಹಂಚಿಕೆ ಮಾಡಿ ಹೊರಡಿಸಲಾದ ಆದೇಶವನ್ನು ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

‘ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮಾಜಗಳ ಕಲ್ಯಾಣ ಸಂಘ’ದ ಅಧ್ಯಕ್ಷ ಶಾಮರಾವ್ ಕೆ.ಪವಾರ್ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಸ್‌.ಶಂಕರನಾರಾಯಣ ಅವರು, ‘ಈ ಪ್ರಕರಣದಲ್ಲಿ ಮಧ್ಯಂತರ ತಡೆ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪೀಠವು ‘ಒಳ ಮೀಸಲಾತಿ ನಿರ್ಣಯದ ಅನ್ವಯ ನೇಮಕಾತಿ ಮಾಡದಂತೆ ತಡೆ ನೀಡಿರುವುದರಿಂದ ಈ ಅರ್ಜಿಯಲ್ಲಿ ಮತ್ತೊಮ್ಮೆ ಮಧ್ಯಂತರ ಆದೇಶ ಪರಿಗಣಿಸುವ ಅಗತ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ADVERTISEMENT

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಮುಖ್ಯಸ್ಥರಿಗೆ ನೋಟಿಸ್‌ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಅಂತೆಯೇ, ನ್ಯಾ.ನಾಗಮೋಹನ ದಾಸ್‌ ವರದಿ ಅನುಸಾರ ಹಂಚಿಕೆ ಮಾಡಲಾಗಿರುವ ಮೀಸಲಾತಿ ಅನ್ವಯ ಹೊಸ ನೇಮಕಾತಿ ಮಾಡುವುದಕ್ಕೆ ತಡೆ ನೀಡಲಾಗಿರುವ ಅರ್ಜಿಯನ್ನೂ ಇದರ ಜೊತೆ ವಿಚಾರಣೆಗೆ ಪಟ್ಟಿ ಮಾಡುವಂತೆ ಆದೇಶಿಸಿತು. 

ಅರ್ಜಿಯಲ್ಲಿ  ಏನಿದೆ?:  ನ್ಯಾ.ಎಚ್‌.ಎನ್‌. ನಾಗಮೋಹನದಾಸ್ ಆಯೋಗ ಸಲ್ಲಿರುವ ವರದಿಯಲ್ಲಿನ ಜಾತಿವಾರು ವರ್ಗೀಕರಣವನ್ನು ಪರಿಷ್ಕರಿಸಿ 101 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಾಗಿ ಅಂದರೆ ಎಡಗೈ, ಬಲಗೈ ಮತ್ತು ಸ್ಪೃಶ್ಯ ಎಂದು ವರ್ಗೀಕರಿಸಿ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಪರಿಶಿಷ್ಟ ಜಾತಿಗೆ ಇರುವ ಒಟ್ಟು ಶೇ 17ರ ಮೀಸಲಾತಿಯಲ್ಲಿ ಎಡಗೈ-ಬಲಗೈ ಸಮುದಾಯಗಳಿಗೆ ತಲಾ ಶೇ 6, ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನೊಳಗೊಂಡ ಸ್ಪೃಶ್ಯ ಗುಂಪುಗಳಿಗೆ ಶೇ 5ರಷ್ಟು ಮೀಸಲಾತಿ ನಿಗದಿಪಡಿಸಲಾಗಿತ್ತು. 2025ರ ಆಗಸ್ಟ್ 19ರಂದು ಮೀಸಲಾತಿ ಹಂಚಿಕೆ ಮಾಡಿರುವ ಸರ್ಕಾರದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಎಸ್‌.ಹರೀಶ್‌ ವಕಾಲತ್ತು ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.