ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ‘ಪ್ರವರ್ಗ 2ಎ’ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ‘ಒಬಿಸಿ’ ಮೀಸಲಾತಿ ಅನುಷ್ಠಾನ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದ ಘಟನೆಯನ್ನು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ನ್ಯಾಯಾಂಗ ತನಿಖೆ ಹೊರತುಪಡಿಸಿ ಬೇರೆ ಯಾವುದಾದರೂ ತನಿಖೆಗೆ ಆದೇಶಿಸುವಂತೆ ಕೋರಲಾದ ಸರ್ಕಾರದ ಮನವಿಯನ್ನು ಹೈಕೋರ್ಟ್ ಭಾಗಶಃ ಮಾನ್ಯ ಮಾಡಿದೆ.
‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗವು ಮೂರು ತಿಂಗಳಲ್ಲಿ ವರದಿ ಸಲ್ಲಿಸಬೇಕು’ ಎಂಬ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಲೇವಾರಿ ಮಾಡಿದೆ.
‘ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬದಲಿಗೆ ಜಿಲ್ಲಾ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ವರದಿ ನೀಡುವ ಗಡುವನ್ನು ಮೂರು ತಿಂಗಳ ಬದಲಿಗೆ ಆರು ತಿಂಗಳಲ್ಲಿ ಸಲ್ಲಿಸಬೇಕು’ ಎಂದು ನಿರ್ದೇಶಿಸಿದೆ.
‘ಬೆಳಗಾವಿಯ ಸುವರ್ಣಸೌಧದ ಮುಂದೆ 2024ರ ಡಿಸೆಂಬರ್ 10ರಂದು ನಡೆದಿರುವ ಲಾಠಿ ಪ್ರಹಾರ ಘಟನೆಯನ್ನು ತನಿಖಾ ಆಯೋಗಕ್ಕೆ ವಹಿಸಲು ಆದೇಶಿಸಬೇಕು’ ಎಂದು ಕೋರಿ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸ್ವಾಮೀಜಿ ಪರ ಪದಾಂಕಿತ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಮತ್ತು ಪ್ರಾಸಿಕ್ಯೂಷನ್ ಪರ ವಿಶೇಷ ಪ್ರಾಸಿಕ್ಯೂಟರ್ ಪದಾಂಕಿತ ಹಿರಿಯ ವಕೀಲ ಸಿ.ಎಚ್.ಜಾಧವ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.