ADVERTISEMENT

‘ಮೀಸಲು ಕಡಿತ ಬೇಡ’

​ಪ್ರಜಾವಾಣಿ ವಾರ್ತೆ
Published 29 ಜೂನ್ 2019, 20:00 IST
Last Updated 29 ಜೂನ್ 2019, 20:00 IST

ಬೆಂಗಳೂರು: ‘ ಪರಿಶಿಷ್ಟ ಪಂಗಡದವರು ಮೀಸಲಾತಿ ಪ್ರಮಾಣವನ್ನು ಶೇ 3ರಿಂದ ಶೇ 7.5 ಹೆಚ್ಚಿಸುವಂತೆ ಬೇಡಿಕೆ ಸಲ್ಲಿಸಿರುವುದು ನ್ಯಾಯಯುತವಾಗಿಯೇ ಇದೆ. ಆದರೆ, ಅವರ ಮೀಸಲಾತಿ ಹೆಚ್ಚಿಸುವ ಸಲುವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಬಾರದು’ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ, ‘ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣ ಹೆಚ್ಚು ಮಾಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಹಿಂದುಳಿದ ವರ್ಗದ ಮೀಸಲಾತಿ ಪ್ರಮಾಣವನ್ನು ಕಡಿತಗೊಳಿಸಿದರೆ ಉಗ್ರ ಹೋರಾಟ ಮಾಡಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘ಪರಿಶಿಷ್ಟ ಪಂಗಡದವರಿಗೆ ನ್ಯಾಯ ದೊರಕಿಸಲು, ಸರ್ಕಾರವು ರಾಜ್ಯದಲ್ಲಿ ಈಗ ಇರುವ ಒಟ್ಟು ಮೀಸಲಾತಿಯ ಮಿತಿಯನ್ನು ಶೇ 50ರಿಂದ ಶೇ 70 ಕ್ಕೆ ಏರಿಸಬಹುದು’ ಎಂದು ಅವರು ಸಲಹೆ ನೀಡಿದರು.

ADVERTISEMENT

‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿತ್ತು. ಆದರೆ, ಇದರ ವರದಿಯನ್ನು ಸರ್ಕಾರ ಇನ್ನೂ ಸ್ವೀಕರಿಸಿಲ್ಲ. ಶೀಘ್ರವೇ ಈ ವರದಿಯನ್ನು ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.