ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯಾಗಿ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಕಿಮ್ಸ್) ಡಾ.ಭಗವಾನ್ ಬಿ.ಸಿ. ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಆದೇಶ ಹೊರಡಿಸಿದ್ದಾರೆ.
ಆರೋಗ್ಯ ವಿಶ್ವವಿದ್ಯಾಲಯ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ, ಸರ್ಕಾರಿ ವೈದ್ಯ ಕಾಲೇಜು ಅಥವಾ ಸರ್ಕಾರಿ ಕರ್ತವ್ಯದಲ್ಲಿರುವ ವೈದ್ಯರನ್ನೇ ಈ ಹುದ್ದೆಗೆ ನೇಮಕ ಮಾಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಖಾಸಗಿ ಕಾಲೇಜಿನ ವೈದ್ಯರೊಬ್ಬರನ್ನು ಕುಲಪತಿಯನ್ನಾಗಿ ನೇಮಕ ಮಾಡಲಾಗಿದೆ.
‘ಕುಲಪತಿ ಆಯ್ಕೆ ಸಂಬಂಧ ರಚಿಸಲಾಗಿದ್ದ ಪ್ರೊ. ಎಂ. ರಾಮಚಂದ್ರಗೌಡ ಅಧ್ಯಕ್ಷತೆಯ ಪರಿಶೋಧನಾ ಸಮಿತಿಯು ಹಾಸನ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ರವಿಕುಮಾರ್ ಬಿ.ಸಿ ಹಾಗೂ ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕಿ ಡಾ. ನಳಿನಿ ಜಿ.ಕೆ. ಹಾಗೂ ಭಗವಾನ್ ಹೆಸರನ್ನು ಶಿಫಾರಸು ಮಾಡಿತ್ತು.
‘ಸಮಿತಿಯ ಶಿಫಾರಸನ್ನು ಪರಿಗಣಿಸಿ, ಭಗವಾನ್ ಅವರನ್ನು ನೇಮಕ ಮಾಡಲಾಗಿದೆ’ ಎಂದು ರಾಜ್ಯಪಾಲರ ಕಾರ್ಯಾಲಯದ ಅಧಿಸೂಚನೆ ತಿಳಿಸಿದೆ.
ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆಯಲ್ಲಿ ಭಾರಿ ಪ್ರಭಾವ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರೊಬ್ಬರ ಒತ್ತಡದ ಮೇರೆಗೆ ಭಗವಾನ್ ಅವರ ನೇಮಕ ನಡೆದಿದೆ ಎಂದು ಹೇಳಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.