ADVERTISEMENT

ರೋರಿಚ್‌ ಎಸ್ಟೇಟ್‌ ಅಭಿವೃದ್ಧಿ ಸ್ಥಗಿತಗೊಳಿಸಿ: ಹೈಕೋರ್ಟ್‌ ತಾಕೀತು

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 16:20 IST
Last Updated 16 ಜನವರಿ 2026, 16:20 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಕನಕಪುರ ರಸ್ತೆಯಲ್ಲಿರುವ ತಾತಗುಣಿ ಎಸ್ಟೇಟ್‌ನಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳು ನಡೆಯುವುದಿಲ್ಲ ಎಂಬುದನ್ನು ಖಾತರಿಪಡಿಸಿ’ ಎಂದು ಹೈಕೋರ್ಟ್‌, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ತಾಕೀತು ಮಾಡಿದೆ.

ಈ ಸಂಬಂಧ ರಾಜರಾಜೇಶ್ವರಿ ನಗರದ ‘ಐ ಕೇರ್‌ ಟ್ರಸ್ಟ್‌’ನ ಸ್ಥಾಪಕ ಸದಸ್ಯೆ ನಿವೇದಿತಾ ಸುಂಕದ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಹರೀಶ್‌ ವಸಿಷ್ಠ ಅವರ ವಾದಕ್ಕೆ ಪ್ರತಿಯಾಗಿ, ಕೇಂದ್ರ ಸರ್ಕಾರದ ಪರ ಹಾಜರಿದ್ದ ಡೆಪ್ಯುಟಿ ಸಾಲಿಸಿಟರ್‌ ಜನರಲ್‌ ಎಚ್‌.ಶಾಂತಿಭೂಷಣ್‌ ಅವರು, ‘ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾವವನ್ನು ಈತನಕ ಸ್ವೀಕರಿಸಿಲ್ಲ. ಈ ಹಂತದಲ್ಲಿ ಆಕ್ಷೇಪಾರ್ಹವಾದ ಯೋಜನೆಯನ್ನು ಜಾರಿಗೊಳಿಸಲಾಗದು’ ಎಂದು ನ್ಯಾಯಪೀಠಕ್ಕೆ ಸ್ಪಷ್ಟಪಡಿಸಿದರು.

ADVERTISEMENT

ರಾಜ್ಯ ಸರ್ಕಾರದ ಪರ ವಕೀಲರು ‘ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಫೆಬ್ರುವರಿ 16ಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ಬೆಂಗಳೂರು ನಗರ ಜಿಲ್ಲೆಯ ತಾತಗುಣಿಯಲ್ಲಿರುವ ರೋರಿಚ್‌ ಮತ್ತು ದೇವಿಕಾರಾಣಿ ಎಸ್ಟೇಟ್‌ ಅನ್ನು ಪರಿಸರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಯೋಜನೆಗೆ 50 ವರ್ಷಗಳ ಅಭಿವೃದ್ಧಿಗೆ ಬಡ್ಡಿರಹಿತ ಸಾಲದ ರೂಪದಲ್ಲಿ ₹99.17 ಕೋಟಿ ಒದಗಿಸಲಾಗಿದೆ. ಈ ಅಂದಾಜು ವೆಚ್ಚದಲ್ಲಿ ಪ್ರವಾಸೋದ್ಯಮ ಇಲಾಖೆಯ ಮುಖಾಂತರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯಡಿ ಟೆಂಡರ್‌ ಕರೆದು ಅನುಷ್ಠಾನಗೊಳಿಲು ತಾತ್ವಿಕ ಅನುಮೋದನೆ ನೀಡಿ ರಾಜ್ಯ ಸರ್ಕಾರ 2024ರ ಡಿಸೆಂಬರ್ 24ರಂದು ಆದೇಶಿಸಿತ್ತು.

ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ‘ರೋರಿಚ್‌ ಎಸ್ಟೇಟ್‌ ಜೀವವೈವಿಧ್ಯದ ತಾಣವಾಗಿದೆ. ಇಲ್ಲಿ ಅಭಿವೃದ್ಧಿ ಚಟುವಟಿಕೆಗೆ ಅವಕಾಶ ನೀಡಿದರೆ, ಅಗಣಿತ ಸಂಖ್ಯೆಯ ಜನರು ಇಲ್ಲಿಗೆ ಭೇಟಿ ನೀಡಲು ಅವಕಾಶ ಆಗುತ್ತದೆ. 450 ಕಾರುಗಳ ನಿಲುಗಡೆಗೆ ಸ್ಥಳ ಒದಗಿಸಲಾಗುತ್ತಿದೆ. ಆನೆಗಳ ಕಾರಿಡಾರ್‌ ಹೊಂದಿರುವ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಗೆ ಎಸ್ಟೇಟ್‌ ಒಳಪಡುತ್ತದೆ. ಆದೇಶದಿಂದ ಎಸ್ಟೇಟ್‌ನಲ್ಲಿ ಪರಿಸರಕ್ಕೆ ಹಾನಿ ಉಂಟಾಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.