ADVERTISEMENT

ರೂಪಾ ವಿರುದ್ಧ ₹1 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ದಾಖಲಿಸಿದ ರೋಹಿಣಿ ಸಿಂಧೂರಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 1:34 IST
Last Updated 1 ಮಾರ್ಚ್ 2023, 1:34 IST
   

ಬೆಂಗಳೂರು: ‘ಫೇಸ್‌ಬುಕ್‌, ಪತ್ರಿಕೆ ಮತ್ತು ಎಲೆಕ್ಟ್ರಾನಿಕ್‌ ಮಾಧ್ಯಮಗಳ ಮುಖಾಂತರ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು’ ಎಂದು ಕೋರಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ.

ಈ ಕುರಿತಂತೆ ವಕಾಲತ್ತು ವಹಿಸಿರುವ ವಕೀಲ ಎಂ.ಆರ್‌.ಅನಿಲ್‌ ಅವರು ರೋಹಿಣಿ ಸಿಂಧೂರಿ ಪರವಾದ ಖಾಸಗಿ ದೂರನ್ನು ಮಂಗಳವಾರ ನ್ಯಾಯಾಲಯಕ್ಕೆ ಸಲ್ಲಿಸಿ, ನ್ಯಾಯಾಧೀಶ ಬಿ.ಸಿ.ಚಂದ್ರಶೇಖರ ಅವರ ಮುಂದೆ ವಾದ ಮಂಡಿಸಿದರು. ‘ಈ ಖಾಸಗಿ ದೂರನ್ನು ದಾಖಲಿಸಿಕೊಂಡು ಆರೋಪಿ ರೂಪಾ ಮೌದ್ಗಿಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದರು. ಹೆಚ್ಚಿನ ವಿಚಾರಣೆಯ ಕ್ರಮವಾಗಿ ಪ್ರಕರಣವನ್ನು ಮಾರ್ಚ್‌ 3ಕ್ಕೆ ಮುಂದೂಡಲಾಗಿದೆ.

ದೂರಿನಲ್ಲಿ ಏನಿದೆ?: ‘ರೂಪಾ ಅವರು ಫೆಬ್ರುವರಿ 18 ಮತ್ತು 19ರಂದು ತಮ್ಮ ಫೇಸ್‌ಬುಕ್‌ ಅಕೌಂಟ್‌ನಲ್ಲಿ ನನ್ನ ವಿರುದ್ಧ ಇಲ್ಲಸಲ್ಲದ ಕೀಳು ಅಭಿರುಚಿಯಿಂದ ಕೂಡಿದ ಆರೋಪಗಳನ್ನು ಮಾಡಿದ್ದಾರೆ. ಇವು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ ಹಾಗೂ
ನನ್ನ ತೇಜೋವಧೆ ಮಾಡುವ ದುರುದ್ದೇಶದಿಂದ ಕೂಡಿವೆ. ಈ ಆರೋಪಗಳಿಂದ ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಕಂಡುಬಂದಿದ್ದು ಮಾನಸಿಕ ಯಾತನೆ ಉಂಟುಮಾಡಿವೆ’ ಎಂದು ದೂರಿನಲ್ಲಿ ವಿವರಿಸಲಾಗಿದೆ.

ADVERTISEMENT

‘ಭಾರತೀಯ ಆಡಳಿತ ಸೇವೆಯ ನಿಯಮಗಳಿಗೆ ವಿರುದ್ಧವಾಗಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ನನ್ನನ್ನು ಟೀಕೆ ಮಾಡುವ ಮೂಲಕ ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗರ ಉಂಟು ಮಾಡಿದ್ದಾರೆ. ನನ್ನ ಇಷ್ಟು ವರ್ಷಗಳ ಪ್ರಾಮಾಣಿಕ ಸರ್ಕಾರಿ ನೌಕರಿಯ ಸದ್ವರ್ತನೆಯನ್ನು ಪ್ರಶ್ನಿಸಿದ್ದಾರೆ. ಆದ್ದರಿಂದ, ನನಗಾಗಿರುವ ಮಾನನಷ್ಟಕ್ಕೆ ಪರಿಹಾರವಾಗಿ ₹1 ಕೋಟಿ ಕೊಡಿಸಿಕೊಡಬೇಕು ಮತ್ತು ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು’ ಎಂದು ರೋಹಿಣಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.