ADVERTISEMENT

ರೋಷನ್‌ ಬೇಗ್‌ ಆಸ್ತಿ ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ: ಸರ್ಕಾರ ಮಾಹಿತಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 21:15 IST
Last Updated 25 ಜೂನ್ 2021, 21:15 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಐ ಮಾನಿಟರಿ ಅಡ್ವೈಸರಿ (ಐಎಂಎ) ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಸಂಬಂಧ ಅವರ ಆಸ್ತಿ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಅಫಿಡವಿಟ್ ಸಲ್ಲಿಸಿದ ಸರ್ಕಾರ, ‘ಐಎಂಎ ಕಾರ್ಯ ಚಟುವಟಿಕೆ ಮತ್ತು ಸಂಸ್ಥೆಯ ಪ್ರಚಾರದಲ್ಲಿ ಬೇಗ್ ಪ್ರಮುಖ ಪಾತ್ರ ವಹಿಸಿದ್ದರು. ಸಂಸ್ಥೆಯಿಂದ ಆರ್ಥಿಕ ಲಾಭ ಗಳಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ಹೇಳಿದೆ.

‘ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ಕೆಪಿಐಡಿ) ಕಾಯ್ದೆಯ ಅಡಿಯಲ್ಲಿ ಬೇಗ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅಧಿಸೂಚನೆ ಹೊರಡಿಸಲಾಗುವುದು. ಆಸ್ತಿ ಗುರುತಿಸಲು ಜೂ.14ರಂದು ಸಕ್ಷಮ ಪ್ರಾಧಿಕಾರಕ್ಕೆ ತಿಳಿಸಲಾಗಿದೆ’ ಎಂದು ಅಫಿಡವಿಟ್‌ನಲ್ಲಿ ವಿವರಿಸಿದೆ.

ADVERTISEMENT

‘ಅಲ್ಲದೇ ಬೇಗ್ ಆಸ್ತಿಯನ್ನು ಗುರುತಿಸಿ ತಕ್ಷಣವೇ ವರದಿ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತರು, ಬೆಂಗಳೂರು ನಗರ ಜಿಲ್ಲಾಧಿಕಾರಿ, ಗ್ರಾಮಾಂತರ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದೆ.

ಬೇಗ್ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಪರಿಣಿತ ಅಧಿಕಾರಿಗಳಿಲ್ಲ ಎಂದು ತಿಳಿಸಿದ್ದ ಸರ್ಕಾರಕ್ಕೆ ತನ್ನ ನಿರ್ಧಾರ ಮರು ಪರಿಶೀಲಿಸುವಂತೆ ಈ ಹಿಂದಿನ ವಿಚಾರಣೆ ವೇಳೆ ಪೀಠ ನಿರ್ದೇಶನ ನೀಡಿತ್ತು. ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರ ಸಮಯಾವಕಾಶ ಕೋರಿತ್ತು.

ಶಿವಾಜಿನಗರದ ಸರ್ಕಾರಿ ಶಾಲೆಗೆ ಐಎಂಎ ಸಮೂಹ ನೀಡಿರುವ ₹12.82 ಕೋಟಿ ದೇಣಿಗೆ ಮರಳಿಸುವ ಸಂಬಂಧ ಸೂಕ್ತ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು ಎಂದು ಪೀಠ ತಿಳಿಸಿತ್ತು. ದೇಣಿಗೆ ಪಡೆದ ಮೊತ್ತವನ್ನು ಮರಳಿ ಪಾವತಿಸಲು ಆಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತಿಳಿಸಿದೆ. ಈ ವಿಷಯದ ಕುರಿತು ಹೆಚ್ಚಿನ ವಿಚಾರಣೆಯನ್ನು ಜುಲೈ 7ಕ್ಕೆ ಪೀಠ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.