ಪ್ರಿಯಾಂಕ್ ಖರ್ಗೆ
ಬೆಂಗಳೂರು: ‘ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು’ ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಂದು ಪತ್ರ ಬರೆದಿದ್ದಾರೆ.
‘ಕರ್ನಾಟಕ ನಾಗರಿಕ ಸೇವಾ(ನಡತೆ) ನಿಯಮಗಳು– 2021ರ ನಿಯಮ 5(1) ಪ್ರಕಾರ, ಯಾರೇ ಸರ್ಕಾರಿ ನೌಕರ, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯ ಆಗಿರಬಾರದು ಅಥವಾ ಅವುಗಳೊಂದಿಗೆ ಸಂಬಂಧ ಹೊಂದಿರಬಾರದು ಅಥವಾ ಯಾವುದೇ ರಾಜಕೀಯ ಚಳವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸಬಾರದು. ಅದರ ಸಹಾಯಾರ್ಥ ವಂತಿಗೆ ನೀಡುವಂತಿಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡುವಂತಿಲ್ಲ ಎಂದು ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದೆ’ ಎಂದು ಪತ್ರದಲ್ಲಿ ಪ್ರಿಯಾಂಕ್ ವಿವರಿಸಿದ್ದಾರೆ.
‘ಈ ಸ್ಪಷ್ಟ ನಿರ್ದೇಶನ ಇದ್ದರೂ ಇತ್ತೀಚಿನ ದಿನಗಳಲ್ಲಿ ಆರ್‌ಎಸ್‌ಎಸ್ ಹಾಗೂ ಇತರೆ ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ. ಆರ್‌ಎಸ್‌ಎಸ್ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಇದನ್ನು ಉಲ್ಲಂಘಿಸುವ ಅಧಿಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಸುತ್ತೋಲೆ ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದೂ ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.