ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ
ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 2ಕ್ಕೆ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಪಥಸಂಚಲನಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಸರ್ಕಾರವನ್ನೂ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡುವಂತೆ ಅರ್ಜಿದಾರರು ಕೋರಿದ್ದಾರೆ.
ಚಿತ್ತಾಪುರದಲ್ಲಿ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮವನ್ನು ಪ್ರಶ್ನಿಸಿ ಪಥಸಂಚಲನದ ಸಂಚಾಲಕರೂ ಆದ ಚಿಂಚೋಳಿಯ ಹಿರಿಯ ನಾಗರಿಕ ಅಶೋಕ್ ಪಾಟೀಲ್ (70) ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ಏಕಸದಸ್ಯ ನ್ಯಾಯಪೀಠ (ಕಲಬುರಗಿ) ಗುರುವಾರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ.
ಕಳೆದ ಮುದ್ದತಿನಲ್ಲಿ ಅರ್ಜಿದಾರರ ಪರ ವಕೀಲರು, ‘ಒಂದು ವೇಳೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರಕ್ಕೆ ಕಷ್ಟವಾಗುತ್ತದೆ ಎಂದಾದರೆ ನಾವು ಕೇಂದ್ರದ ನೆರವು ಕೇಳುತ್ತೇವೆ’ ಎಂದು ಹೈಕೋರ್ಟ್‌ಗೆ ತಿಳಿಸಿದ್ದರು.
ಇದೀಗ ಕೇಂದ್ರ ಗೃಹ ಸಚಿವಾಲಯವನ್ನೂ ಈ ಪ್ರಕರಣದಲ್ಲಿ 6ನೇ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡುವಂತೆ ಕೋರಿದ್ದಾರೆ. ಮಧ್ಯಾಹ್ನದ ವಿಚಾರಣೆಯಲ್ಲಿ ನ್ಯಾಯಪೀಠ ಈ ಕುರಿತು ನಿರ್ಣಯ ಕೈಗೊಳ್ಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.