ಸೇಡಂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ ಮನ್ನೆ ಪಥಸಂಚಲನದಲ್ಲಿ ಭಾಗವಹಿಸಿರುವುದು
ಕಲಬುರಗಿ/ ಯಾದಗಿರಿ: ಸರ್ಕಾರದ ನಿರ್ಬಂಧದ ಮಧ್ಯೆಯೂ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ವಿವಿಧೆಡೆ ಆಯೋಜಿಸಿದ್ದ ಪಥಸಂಚಲನದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಸರ್ಕಾರಿ ಅಧಿಕಾರಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಭಾನುವಾರ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಆಯೋಜಿಸಿದ್ದ ಪಥಸಂಚಲನದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವ ಮೂಲಕ ಸೆಡ್ಡು ಹೊಡೆದಿದ್ದಾರೆ. ಒಂದು ಅಂದಾಜಿನ ಪ್ರಕಾರ ನೂರಕ್ಕೂ ಅಧಿಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಥಸಂಚಲನದಲ್ಲಿ ಭಾಗವಹಿಸಿದ್ದರು ಎಂದು ಮೂಲಗಳು ‘ಪ್ರಜಾವಾಣಿ’ಗೆ ಖಚಿತಪಡಿಸಿವೆ.
ಇತ್ತೀಚೆಗೆ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ‘ಕಾಂಗ್ರೆಸ್ ಮುಖಂಡರೂ ಆರ್‌ಎಸ್‌ಎಸ್‌ಗೆ ದೇಣಿಗೆ ನೀಡಿ ಬೆಂಬಲಿಸಿದ್ದಾರೆ’ ಎಂದು ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಆಡಳಿತ ಪಕ್ಷದ ಕಾರ್ಯಕರ್ತರು ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ.
ಸೇಡಂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನಾಗರಾಜ ಮನ್ನೆ ಭಾಗವಹಿಸಿದ್ದು, ಈ ಕುರಿತ ಚಿತ್ರಗಳು ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೇಕಲ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುರಾಜ ಹಾಗೂ ಬರದೇವನಾಳ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಶಿವಮಲ್ಲಯ್ಯ ಎಂಬುವವರು ಗಣವೇಷಧಾರಿ ಆಗಿ ಪಾಲ್ಗೊಂಡಿದ್ದರು ಎನ್ನಲಾಗುತ್ತಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾರ್ಯಕ್ರಮದಲ್ಲಿ ಹುಣಸಗಿಯ ಒಬ್ಬ ಶಿಕ್ಷಕ ಮತ್ತು ಬಿಲ್ ಕಲೆಕ್ಟರ್ ಗಣವೇಷಧಾರಿಯಾಗಿ ಪಾಲ್ಗೊಂಡಿದ್ದರು ಎನ್ನಲಾದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಯಾದಗಿರಿ ಡಿಡಿಪಿಐ ಚನ್ನಬಸಪ್ಪ ಮುಧೋಳ, 'ಗಣವೇಷಧಾರಿ ಶಿಕ್ಷಕನ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬಗ್ಗೆ ಮಾಹಿತಿ ಇಲ್ಲ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.