ADVERTISEMENT

ಆರ್‌ಟಿಇ: ತಿದ್ದುಪಡಿ ಎತ್ತಿಹಿಡಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 31 ಮೇ 2019, 20:19 IST
Last Updated 31 ಮೇ 2019, 20:19 IST
ಹೈಕೋರ್ಟ್‌ (ಸಂಗ್ರಹ ಚಿತ್ರ)
ಹೈಕೋರ್ಟ್‌ (ಸಂಗ್ರಹ ಚಿತ್ರ)   

ಬೆಂಗಳೂರು: ನೆರೆಹೊರೆಯಲ್ಲಿ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಿದ್ದರೆ ಅಂತಹ ಕಡೆ ಆರ್‌ಟಿಇ ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ, ‘ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು-2012’ರ ನಿಯಮ 4ಕ್ಕೆ ತಂದ ತಿದ್ದುಪಡಿಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ಈ ತಿದ್ದುಪಡಿ ಪ್ರಶ್ನಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಮೇಲಿನ ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

‘ತಿದ್ದುಪಡಿ ಅಸಾಂವಿಧಾನಿಕ, ಅನಿಯಂತ್ರಿತ ಹಾಗೂ ದುರುದ್ದೇಶದಿಂದ ಕೂಡಿದೆ. ಕಾನೂನು ಬಾಹಿರ ಎಂಬುದನ್ನು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಡಲು ಅರ್ಜಿದಾರರು ವಿಫಲರಾಗಿದ್ದಾರೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ADVERTISEMENT

‘ಒಂದೊಮ್ಮೆ ಅರ್ಜಿದಾರರ ಮನವಿ ಪುರಸ್ಕರಿಸಿದರೆ ಸರ್ಕಾರಿ, ಸ್ಥಳೀಯ ಪ್ರಾಧಿಕಾರ ಮತ್ತು ಅನುದಾನಿತ ಶಾಲೆಗಳ ಭವಿಷ್ಯ ಅತಂತ್ರವಾಗಲಿದೆ ಎಂಬ ಸರ್ಕಾರಿ ವಕೀಲರ ವಾದ ಸಮಂಜಸವಾಗಿದೆ’ ಎಂದೂ ನ್ಯಾಯಪೀಠ ಹೇಳಿದೆ.

ಪ್ರಕರಣವೇನು?: ‘ತಿದ್ದುಪಡಿ ಕುರಿತಂತೆ 2019ರ ಜನವರಿ 30ರಂದು ಹೊರಡಿಸಿರುವ ಅಧಿಸೂಚನೆ ಕೇಂದ್ರದ ‘ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಮೂಲ ಕಾಯ್ದೆ-2009’ಕ್ಕೆ ತದ್ವಿರುದ್ಧವಾಗಿದೆ. ಇದರಿಂದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಲಿದ್ದಾರೆ. ಆದ್ದರಿಂದ ಈ ಅಧಿಸೂಚನೆ ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ನಗರದ ಕುರುಬರಹಳ್ಳಿಯ ‘ಎಜುಕೇಷನ್‌ ರೈಟ್ಸ್‌ ಟ್ರಸ್ಟ್‌’ನ ಟ್ರಸ್ಟೀ ಸಿ.ಸುರೇಶ್‌ ಕುಮಾರ್ ಸೇರಿದಂತೆ ಐವರು ಹಾಗೂ ‘ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ’ದ ಪ್ರಧಾನ ಕಾರ್ಯದರ್ಶಿ ಬಿ.ಎನ್‌.ಯೋಗಾನಂದ ಈ ಅರ್ಜಿ ಸಲ್ಲಿಸಿದ್ದರು.

ವಿಟಿಯು: ಅಮಾನತು ಆದೇಶ ತಡೆ ತೆರವು
ಬೆಂಗಳೂರು: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಸಚಿವ ಡಾ.ಎಚ್.ಎನ್. ಜಗನ್ನಾಥ ರೆಡ್ಡಿ ಇಲಾಖಾ ತನಿಖೆ ಎದುರಿಸಲಿ‘ ಎಂದು ಹೇಳಿರುವ ಹೈಕೋರ್ಟ್‌, ಅವರ ಅಮಾನತು ಆದೇಶಕ್ಕೆ ಏಕಸದಸ್ಯ ನ್ಯಾಯಪೀಠ ನೀಡಿದ್ದ ಮಧ್ಯಂತರ ತಡೆ ಆದೇಶವನ್ನು ತೆರವುಗೊಳಿಸಿದೆ.

ಈ ಕುರಿತಂತೆ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಈ ಆದೇಶ ನೀಡಿದೆ.

ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ ₹ 200 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ ಹಗರಣಕ್ಕೆ ಸಂಬಂಧಿಸಿದಂತೆ ಜಗನ್ನಾಥ ರೆಡ್ಡಿ ಅವರನ್ನು ಕುಲಪತಿ ಪ್ರೊ.ಕರಿಸಿದ್ದಪ್ಪ ಅಮಾನತುಗೊಳಿಸಿದ್ದರು. ಈ ಆದೇಶವನ್ನು ರೆಡ್ಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.