
ಬೆಂಗಳೂರು: ನಗರ ಪ್ರದೇಶಗಳಿಗಿಂತ ಗ್ರಾಮಾಂತರದಲ್ಲೇ ಲ್ಯಾಪ್‌ಟಾಪ್, ಮೊಬೈಲ್ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಎಲೆಕ್ಟ್ರಾನಿಕ್ಸ್ ಸಾಮಗ್ರಿಗಳನ್ನು ಬಳಸುತ್ತಿರುವ ರಾಜ್ಯದ ಒಟ್ಟು ಜನರಲ್ಲಿ ಶೇ 78ರಷ್ಟು ಗ್ರಾಮೀಣ ಪ್ರದೇಶದವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಾಲಾ ಶಿಕ್ಷಣ ಇಲಾಖೆ, ಚೈಲ್ಡ್ ಫಂಡ್ ಇಂಡಿಯಾ ಸಹಯೋಗದಲ್ಲಿ ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಬುಧವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
‘ಸಾಮಾಜಿಕ ಜಾಲತಾಣಗಳ ಬಳಕೆಯಲ್ಲೂ ಗ್ರಾಮೀಣರೇ ಮುಂದಿದ್ದಾರೆ. 14ರಿಂದ 18 ವರ್ಷದ ಮಕ್ಕಳು ಅತಿಹೆಚ್ಚು ಆನ್‌ಲೈನ್ ಗೀಳಿಗೆ ಸಿಲುಕುತ್ತಿದ್ದಾರೆ. ಕಾನೂನು, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಇಲಾಖೆ ಒಳಗೊಂಡಂತೆ ಸಮಿತಿ ಮಾಡಿದರೂ ಸಾಮಾಜಿಕ ಜಾಲತಾಣದ ಪಿಡುಗನ್ನು ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.
‘ಮಕ್ಕಳ ಪಾಲಿಗೆ ಸಾಮಾಜಿಕ ಜಾಲತಾಣಗಳು ಪಿಡುಗಾಗಿದ್ದು, ಶಿಕ್ಷಕರು, ಪೋಷಕರು ಮಕ್ಕಳಿಗೆ ಅರಿವು ಮೂಡಿಸಬೇಕು. ಮಕ್ಕಳಿಗೆ ಸುರಕ್ಷಿತವಾಗಿ ಮೊಬೈಲ್ ಬಳಸುವ ಮಾರ್ಗಗಳನ್ನು ತಿಳಿಸಬೇಕು. ಆನ್‌ಲೈನ್ ಅಪಾಯಗಳ ಕುರಿತು ಮಾಹಿತಿ ನೀಡಬೇಕು. ಮಕ್ಕಳ ಬೆಳವಣಿಗೆಗೆ ಮಾರಕವಾಗದಂತೆ, ಶಿಕ್ಷಣಕ್ಕೆ ತೊಡಕಾಗದಂತೆ ಎಚ್ಚರವಹಿಸಬೇಕು. ಪೊಲೀಸರು, ಶಾಲಾ, ಕಾಲೇಜುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಸಾಮಾಜಿಕ ಜಾಲತಾಣದ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಬೇಕು’ ಎಂದರು.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷ ಶಶಿಧರ ಕೋಸುಂಬೆ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಾಬು, ಚೈಲ್ಡ್ ಫಂಡ್ ಇಂಡಿಯಾದ ನಿರ್ದೇಶಕಿ ಶಬಂತಿ ಸೇನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.