ADVERTISEMENT

ಸದಾಶಿವ ಆಯೋಗದ ವರದಿ ಅಪ್ರಸ್ತುತ: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2023, 15:32 IST
Last Updated 9 ಡಿಸೆಂಬರ್ 2023, 15:32 IST
ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿ ಮನವಿ ಸಲ್ಲಿಸಿತು
ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿ ಮನವಿ ಸಲ್ಲಿಸಿತು   

ಬೆಂಗಳೂರು: ‘ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ಸಲ್ಲಿಸಿರುವ ವರದಿಯು ಈಗ ಅಪ್ರಸ್ತುತವಾಗಿದ್ದು, ಅದಕ್ಕೆ ಮರುಜೀವ ನೀಡಬಾರದು’ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಶನಿವಾರ ಭೇಟಿ ಮಾಡಿದ ನಿಯೋಗವು, ‘ಈ ವರದಿಯನ್ನು ಅನುಷ್ಠಾನಕ್ಕೆ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು. ಇಂತಹ ಅಸಾಂವಿಧಾನಿಕ ವಿಚಾರಕ್ಕೆ ಕೈ ಹಾಕಬಾರದು’ ಎಂದೂ ಆಗ್ರಹಿಸಿದೆ.

‘ಬಂಜಾರ, ಭೋವಿ, ಕೊರಮ, ಕೊರಚ, ಛಲವಾದಿ, ಅಲೆಮಾರಿ ಮತ್ತಿತರ ದಮನಿತ ಸಮುದಾಯಗಳ ಹಿತರಕ್ಷಣೆ ಮಾಡಬೇಕು. ಸಮುದಾಯಗಳನ್ನು ಎತ್ತಿ ಕಟ್ಟುವ ಚಿತಾವಣೆ ಮಾಡುವವರ ಮೇಲೆ ಸೂಕ್ತ ಕ್ರಮವಹಿಸಬೇಕು’ ಎಂದು ಮನವಿ ಮಾಡಿದೆ.

ADVERTISEMENT

ಶಿಳ್ಳೆ ಕ್ಯಾತ ಜಾತಿ ಪ್ರಮಾಣಪತ್ರ ವಿತರಣೆ ಕುರಿತು ಬಿ.ಎಚ್. ಮಂಜುನಾಥ್ ಅವರು ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ವಿಧಾನ ಪರಿಷತ್‌ ಸದಸ್ಯ ಪ್ರಕಾಶ ರಾಥೋಡ ಇದ್ದರು. ನಿಯೋಗದಲ್ಲಿ ಮಾಜಿ ಸಚಿವ ಅರವಿಂದ ಲಿಂಬಾವಳಿ, ವೇದಿಕೆಯ ಅಧ್ಯಕ್ಷ ರವಿ ಎಚ್. ಮಾಕಳಿ, ಕಾರ್ಯಾಧ್ಯಕ್ಷ ಅನಂತ ನಾಯ್ಕ್, ಉಪಾಧ್ಯಕ್ಷ ಆದರ್ಶ್ ಎಲ್ಲಪ್ಪ, ಶಿವಮೊಗ್ಗ ಪಲ್ಲವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.