ADVERTISEMENT

ಸತೀಶ ಜಾರಕಿಹೊಳಿ ದೆಹಲಿ ಭೇಟಿ: ಮೂಡಿದ ಕುತೂಹಲ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2024, 20:28 IST
Last Updated 3 ಸೆಪ್ಟೆಂಬರ್ 2024, 20:28 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ, ಸಚಿವ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಹುಲ್‌ ಸೇರಿದಂತೆ ಹೈಕಮಾಂಡ್‌ನ ಕೆಲವು ನಾಯಕರನ್ನು ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಭೇಟಿ ಮಾಡಿರುವ ಸತೀಶ ಜಾರಕಿಹೊಳಿ, ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ, ತಮ್ಮ ಆಪ್ತರ ಬಳಿ ಈ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಆದರೆ, ದೆಹಲಿಗೆ ಹೋಗಿ ಬಂದಿರುವ ವಿಚಾರದಲ್ಲಿ ಬಹಿರಂಗವಾಗಿ ಅವರು ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ. ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡದೆ ಅಂತರ ಕಾಯ್ದುಕೊಂಡಿದ್ದಾರೆ.

ADVERTISEMENT

ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದ ಸತೀಶ ಜಾರಕಿಹೊಳಿ, ಬಳಿಕ ಗೃಹ ಸಚಿವ ಜಿ. ಪರಮೇಶ್ವರ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದರು. 

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಮಧ್ಯೆ, ಸತೀಶ ಜಾರಕಿಹೊಳಿ ಅವರ ಈ ನಡೆ ನಾನಾ ಚರ್ಚೆಗಳಿಗೆ ಕಾರಣವಾಗಿದೆ.

ಈ ವಿಚಾರವಾಗಿ ಮಂಗಳವಾರ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ಸತೀಶ ಪದೇ ಪದೇ ದೆಹಲಿಗೆ ಭೇಟಿ ನೀಡುತ್ತಿರುವುದರಲ್ಲಿ ವಿಶೇಷ ಏನೂ ಇಲ್ಲ. ಮುಖ್ಯಮಂತ್ರಿ ರೇಸ್ ಏನೂ ಇಲ್ಲ. ನಾನು ಯಾವುದೊ ಉದ್ದೇಶಕ್ಕೆ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡುತ್ತೇನೆ. ಅವರೂ ಇನ್ಯಾವುದೊ ಕಾರಣಕ್ಕೆ ಭೇಟಿ ಮಾಡುತ್ತಾರೆ. ದೆಹಲಿಗೆ ಹೋದರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಸಂಪ್ರದಾಯ. ಎಲ್ಲದಕ್ಕೂ ರಾಜಕೀಯ ಬಣ್ಣ ಹಾಕುವುದು ಬೇಡ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.