ADVERTISEMENT

ಸತೀಶ ಜಾರಕಿಹೊಳಿ–ಎಂ.ಬಿ ಪಾಟೀಲ ಚರ್ಚೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2025, 0:12 IST
Last Updated 29 ಮಾರ್ಚ್ 2025, 0:12 IST
ಸತೀಶ ಜಾರಕಿಹೊಳಿ
ಸತೀಶ ಜಾರಕಿಹೊಳಿ   

ಬೆಂಗಳೂರು:‌ ನವದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮರಳಿರುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಶುಕ್ರವಾರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

‘ಮಧುಬಲೆ’ ಗದ್ದಲದ ನಡುವೆ ದೆಹಲಿಗೆ ತೆರಳಿದ್ದ ಸತೀಶ ಜಾರಕಿಹೊಳಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದೇ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರನ್ನೂ ಭೇಟಿ ಮಾಡಿದ್ದರು. ಈ ಭೇಟಿ ರಾಜಕೀಯ ವಲಯದಲ್ಲಿ ನಾನಾ ಚರ್ಚೆಗೆ ಕಾರಣವಾಗಿದ್ದವು.

‌ಸತೀಶ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ‌ ಎಂ.ಬಿ. ಪಾಟೀಲ ಮಾತುಕತೆ ನಡೆಸಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗಿನ ಚರ್ಚೆಯ ಬಗ್ಗೆಯೇ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ, ‘ಎಂ.ಬಿ. ಪಾಟೀಲರ ಭೇಟಿ ಮತ್ತು ಮಾತುಕತೆಯಲ್ಲಿ ವಿಶೇಷ ಅರ್ಥ ಕಲ್ಪಿಸಬೇಕಾದ ಅಗತ್ಯವಿಲ್ಲ. ಇದು ಸಹಜ ಭೇಟಿ’ ಎಂದು ಸಮರ್ಥನೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ: ದೆಹಲಿ ಭೇಟಿಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಕುರಿತು ಹೈಕಮಾಂಡ್‌ ನಾಯಕರ ಜೊತೆ ಸತೀಶ ಜಾರಕಿಹೊಳಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿಗೆ ಪೂರ್ಣಾವಧಿ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಅವರು ಮತ್ತೊಮ್ಮೆ ವಾದ ಮುಂದಿಟ್ಟಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.