ಸತೀಶ್ ಸೈಲ್
ಬೆಂಗಳೂರು: ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಕದ್ದು, ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಅರ್ ದಾಖಲಿಸಿಕೊಂಡಿದ್ದ ಇ.ಡಿ ಸಹ ತನಿಖೆ ಆರಂಭಿಸಿತ್ತು. ಇದೇ ಆಗಸ್ಟ್ 13 ಮತ್ತು 14ರಂದು ಸತೀಶ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿತ್ತು. ಈ ವೇಳೆ ₹13 ಕೋಟಿಯಷ್ಟು ನಗದು ಮತ್ತು ಚಿನ್ನಾಭರಣ ವಶಕ್ಕೆ ಪಡೆದಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸತೀಶ್ ಅವರಿಗೆ ಹಲವು ಬಾರಿ ಸಮನ್ಸ್ ನೀಡಲಾಗಿತ್ತು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಜತೆಗೆ ಹಾಜರಾಗದೇ ಇರಲು ಕಾರಣ ತಿಳಿಸಿರಲಿಲ್ಲ ಮತ್ತು ಸಮಯವನ್ನೂ ಕೇಳಿರಲಿಲ್ಲ. ಪದೇ ಪದೇ ವಿಚಾರಣೆಗೆ ಬರದೇ ಇದ್ದ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಸತೀಶ್ ಅವರನ್ನು ಬಂಧಿಸಿದ ಅಧಿಕಾರಿಗಳು ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಕರೆತಂದರು. ಅಲ್ಲಿ ಕೆಲಕಾಲ ವಿಚಾರಣೆ ನಡೆಸಿ, ಬೌರಿಂಗ್ ಆಸ್ಪತ್ರೆಗೆ ಕರೆತಂದರು. ವೈದ್ಯಕೀಯ ಪರೀಕ್ಷೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.