
ಬೆಂಗಳೂರು: ‘ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಈಗಾಗಲೇ ಸಲ್ಲಿಸಲಾಗಿರುವ ವೈದ್ಯಕೀಯ ದಾಖಲೆಗಳ ಬಗ್ಗೆ ನಿಮಗೇನಾದರೂ ಅನುಮಾನಗಳಿದ್ದರೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸಿ’ ಎಂದು ಹೈಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಆದೇಶಿಸಿದೆ.
ಈ ಸಂಬಂಧ ಸತೀಶ್ ಸೈಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಇ.ಡಿ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಅರವಿಂದ ಕಾಮತ್, ‘ಅರ್ಜಿದಾರರನ್ನು ದೆಹಲಿಗೆ ಕರೆದುಕೊಂಡು ಹೋಗಬೇಕೊ ಅಥವಾ ಇಲ್ಲೇ ಬೇರೆ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಬೇಕೊ ಎಂಬುದರ ಕುರಿತು ಸಮನ್ವಯ ಸಾಧಿಸಬೇಕಿದೆ. ಆದ್ದರಿಂದ, ಅದಕ್ಕಾಗಿ ಇನ್ನಷ್ಟು ಸಮಯಾವಕಾಶ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಸೈಲ್ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ.ಚೌಟ ಮತ್ತು ಸೈಲ್ ಪರ ವಕಾಲತ್ತು ವಹಿಸಿರುವ ಎಸ್.ಸುನಿಲ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ಅರ್ಜಿದಾರರನ್ನು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲೇ ತಪಾಸಣೆಗೆ ಒಳಪಡಿಸಿ ಆರೋಗ್ಯ ಮೌಲ್ಯಮಾಪನದ ದಾಖಲೆಗಳನ್ನು ಪಡೆಯಲಾಗಿದೆ. ಹೀಗಿರುವಾಗ ಪುನಃ ಅವರನ್ನು ದೆಹಲಿಗೆ ಕರೆದೊಯ್ದು ತಪಾಸಣೆಗೆ ಒಳಪಡಿಸಬೇಕು ಎಂಬ ವಾದ ಸರಿಯಲ್ಲ. ಬೇಕಾದರೆ ಈ ದಾಖಲೆಗಳು ಸುಳ್ಳು ಎಂದು ಇ.ಡಿ ಹೇಳಲಿ’ ಎಂದು ಸವಾಲೆಸೆದರು.
ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ‘ಇದು ತರವಲ್ಲ’ ಎಂದು ಇ.ಡಿ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ‘ಅರ್ಜಿದಾರರು ಸಲ್ಲಿಸಿರುವ ದಾಖಲೆಗಳ ಬಗ್ಗೆ ನಿಮಗೆ ಅನುಮಾನಗಳಿದ್ದರೆ ಅದಕ್ಕಾಗಿ ಪ್ರಮಾಣ ಪತ್ರ ಸಲ್ಲಿಸಿ’ ಎಂದು ಇ.ಡಿ ಪರ ವಕೀಲರಿಗೆ ನಿರ್ದೇಶಿಸಿ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಿಸಿ ವಿಚಾರಣೆಯನ್ನು ಇದೇ 11ಕ್ಕೆ ಮುಂದೂಡಿತು.
ಕೋರಿಕೆ ಏನು?: ‘ಅಕ್ರಮ ಹಣ ವರ್ಗಾವಣೆ ಆರೋಪದಡಿ ಇ.ಡಿ ದಾಖಲಿಸಿರುವ ಇಸಿಐಆರ್‌ಗೆ (ಜಾರಿ ನಿರ್ದೇಶನಾಲಯ ಪ್ರಕರಣದ ಮಾಹಿತಿ ವರದಿ) ಸಂಬಂಧಿಸಿದಂತೆ ನೀಡಲಾಗಿದ್ದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ರದ್ದುಪಡಿಸಿದೆ ಹಾಗೂ ಜಾಮೀನು ರಹಿತ ಬಂಧನದ ವಾರಂಟ್ ಹೊರಡಿಸಿದೆ. ನಾನು ಜಠರ ಮತ್ತು ಕರುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ನಿಯಮಿತ (ರೆಗ್ಯುಲರ್) ಜಾಮೀನು ನೀಡಬೇಕು’ ಎಂದು ಸೈಲ್ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.