ADVERTISEMENT

ಲೈಂಗಿಕ ಕಿರುಕುಳ ಆರೋಪ; ಬಿ.ವಿ.ಶ್ರೀನಿವಾಸ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ರಕ್ಷಣೆ

ಪಿಟಿಐ
Published 17 ಮೇ 2023, 10:40 IST
Last Updated 17 ಮೇ 2023, 10:40 IST
   

ನವದೆಹಲಿ: ಅಸ್ಸಾಂನ ಯುವ ಕಾಂಗ್ರೆಸ್‌ನ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಅಂಕಿತಾ ದತ್ತಾ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಭದ್ರಾವತಿಯ ಬಿ.ವಿ. ಶ್ರೀನಿವಾಸ್‌ ಅವರಿಗೆ ಸುಪ್ರೀಂ ಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ಒದಗಿಸಿದೆ.

ನಿರೀಕ್ಷಣಾ ಜಾಮೀನು ತಿರಸ್ಕರಿಸಿದ್ದ ಗುವಾಹಟಿ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಶ್ರೀನಿವಾಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಅಂಕಿತಾ ದತ್ತಾ ದಾಖಲಿಸಿದ್ದ ಪ್ರಕರಣದಲ್ಲಿ ಶ್ರೀನಿವಾಸ್ ಅವರಿಗೆ ಮೇ 5ರಂದು ಗುವಾಹಟಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು.

ADVERTISEMENT

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯ್ ಮತ್ತು ಸಂಜಯ್ ಕರೋಲ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, ಈ ಸಂಬಂಧ ಅಸ್ಸಾಂ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದ್ದು, ಜುಲೈ 10ರಂದು ಪ್ರತಿಕ್ರಿಯೆ ನೀಡುವಂತೆ ಕೇಳಿದೆ.

‘ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಒಂದು ತಿಂಗಳ ವಿಳಂಬ ಹಿನ್ನೆಲೆಯಲ್ಲಿ ಅರ್ಜಿದಾರರು ಮಧ್ಯಂತರ ಭದ್ರತೆ ಪಡೆಯಲು ಅರ್ಹರಾಗಿದ್ದಾರೆ. ಬಂಧನದ ಸಂದರ್ಭ ಬಂದಾಗ, ಅರ್ಜಿದಾರರನ್ನು ₹50,000 ಮೊತ್ತದ ಶ್ಯೂರಿಟಿ ಆಧಾರದ ಮೇಲೆ ನಿರೀಕ್ಷಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲು ನಾವು ನಿರ್ದೇಶಿಸುತ್ತೇವೆ’ಎಂದು ಪೀಠ ಹೇಳಿದೆ.

ಇದೇವೇಳೆ, ತನಿಖೆಗೆ ಸಹಕರಿಸುವಂತೆ ಶ್ರೀನಿವಾಸ್ ಅವರಿಗೆ ಸೂಚಿಸಿರುವ ನ್ಯಾಯಾಲಯ, ಮೇ 22ರಂದು ಪೊಲೀಸರ ಎದುರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಜೊತೆಗೆ, ರಾಷ್ಟ್ರೀಯ ಮಹಿಳಾ ಆಯೋಗದ ತನಿಖೆಯಲ್ಲೂ ಸಹಕರಿಸುವಂತೆ ಕೋರ್ಟ್ ಸೂಚಿಸಿದೆ.

ದೂರುದಾರೆ ಲೈಂಗಿಕ ಕಿರುಕುಳದ ದೂರು ದಾಖಲಿಸುವ ಮೊದಲು ಟ್ವೀಟ್‌ಗಳಲ್ಲಿ ತಾರತಮ್ಯದ ಆರೋಪ ಮಾಡಿದ್ದರು. 6 ಸಂದರ್ಶನಗಳನ್ನೂ ನೀಡಿದ್ದು, ಎಲ್ಲಿಯೂ ಲೈಂಗಿಕ ಕಿರುಕುಳದ ಬಗ್ಗೆ ಹೇಳಿಕೊಂಡಿಲ್ಲ ಎಂದು ಶ್ರೀನಿವಾಸ್ ಪರ ವಕೀಲ ಅಭಿಷೇಕ್ ಸಿಂಘ್ವಿ ವಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.